ಹೊಸದಿಲ್ಲಿ, ಮೇ 22 : ಜೂನ್ 21ರಂದು ನಡೆಯಲಿರುವ ನೀಟ್-ಯುಜಿ ಮರು ಪರೀಕ್ಷೆಯನ್ನು ಯಾವುದೇ ಲೋಪವಿಲ್ಲದೆ ನಡೆಸಲಾಗುವುದು ಎಂದು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ ಮತ್ತೆ ಭರವಸೆ ನೀಡಿದ್ದಾರೆ. 2024ರಲ್ಲಿ ನೀಟ್-ಯುಜಿ ಪ್ರಶ್ನೆಪತ್ರಿಕೆ ಸೋರಿಕೆ ಸಂದರ್ಭದಲ್ಲಿಯೂ ಅವರು ಇದೇ ಭರವಸೆ ದೇಶದ ಜನರಿಗೆ ನೀಡಿದ್ದರು.
ವೈದ್ಯಕೀಯ ಶಿಕ್ಷಣ ಕೋರ್ಸ್‌ಗಳ ಪ್ರವೇಶಕ್ಕಾಗಿ ಮೇ 3ರಂದು ನಡೆದಿದ್ದ ನೀಟ್-ಯುಜಿ ಪರೀಕ್ಷೆಯನ್ನು ಪ್ರಶ್ನೆಪತ್ರಿಕೆ ಸೋರಿಕೆ ಹಿನ್ನೆಲೆಯಲ್ಲಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ ರದ್ದುಪಡಿಸಿತ್ತು. ಈ ಬೆಳವಣಿಗೆಯಿಂದ ದೇಶದಾದ್ಯಂತ ಭಾರೀ ಆಕ್ರೋಶ ವ್ಯಕ್ತವಾಗಿದ್ದು, ಲಕ್ಷಾಂತರ ವಿದ್ಯಾರ್ಥಿಗಳು ಅನಿಶ್ಚಿತತೆಗೆ ಸಿಲುಕಿದ್ದರು.
ಜಾಗರಣ ಭಾರತ ಶಿಕ್ಷಣ ಸಮಾವೇಶ 2026 ಉದ್ಘಾಟಿಸಿ ಮಾತನಾಡಿದ ಧರ್ಮೇಂದ್ರ ಪ್ರಧಾನ, ಹಿಂದಿನ ಬಾರಿ ನಡೆದ ಪ್ರಶ್ನೆಪತ್ರಿಕೆ ಸೋರಿಕೆ ರೀತಿಯ ಘಟನೆಗಳು ಮರುಕಳಿಸದಂತೆ ಕಟ್ಟುನಿಟ್ಟಿನ ಭದ್ರತಾ ಕ್ರಮಗಳನ್ನು ಕೈಗೊಳ್ಳಲಾಗುವುದು ಎಂದು ಈ ಹಿಂದೆ ಹೇಳಿದ್ದನ್ನೇ ಪುನರುಚ್ಛರಿಸಿದ್ದಾರೆ.
ನೀಟ್-ಯುಜಿ ಪರೀಕ್ಷೆಯಲ್ಲಿ ಅಕ್ರಮ ನಡೆದಿರುವುದು ಪತ್ತೆಯಾದ ಹಿನ್ನೆಲೆಯಲ್ಲಿ ಸರ್ಕಾರ ಕಠಿಣ ನಿರ್ಧಾರ ತೆಗೆದುಕೊಳ್ಳಬೇಕಾಯಿತು. ಪರೀಕ್ಷಾ ಮಾಫಿಯಾದ ಕಾರಣದಿಂದ ಒಬ್ಬ ಅರ್ಹ ವಿದ್ಯಾರ್ಥಿಯೂ ತನ್ನ ಸೀಟು ಕಳೆದುಕೊಳ್ಳಬಾರದು ಎಂಬುದು ಸರ್ಕಾರದ ಉದ್ದೇಶ ಎಂದು ಅವರು ತಿಳಿಸಿದ್ದಾರೆ.
ಜೂನ್ 21ರಂದು ನಡೆಯಲಿರುವ ಮರು ಪರೀಕ್ಷೆ ಶೇ 100ರಷ್ಟು ದೋಷಮುಕ್ತವಾಗಿರಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದ ಅವರು, ಪರೀಕ್ಷಾ ಪ್ರಕ್ರಿಯೆಯನ್ನು ಸಂಪೂರ್ಣ ಪಾರದರ್ಶಕವಾಗಿ ನಡೆಸಲು ಕ್ರಮ ಕೈಗೊಳ್ಳಲಾಗಿದೆ ಎಂದರು.
ಸುಮಾರು 22 ಲಕ್ಷ ವಿದ್ಯಾರ್ಥಿಗಳು ಈ ವಿವಾದದಿಂದ ನಿರಾಸೆ ಮತ್ತು ಆತಂಕಕ್ಕೆ ಒಳಗಾಗಿದ್ದಾರೆ. ವಿದ್ಯಾರ್ಥಿಗಳ ಯಾತನೆ ಮತ್ತು ಪೋಷಕರ ಕಳವಳವನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿದೆ ಎಂದು ಧರ್ಮೇಂದ್ರ ಪ್ರಧಾನ ಹೇಳಿದ್ದಾರೆ.
ಮಕ್ಕಳ ನೋವನ್ನು ಮನಗಂಡು ಹೊಣೆ ಹೊತ್ತು ಮಾತನಾಡುತ್ತಿದ್ದೇನೆ. ವ್ಯವಸ್ಥೆಯನ್ನು ಸರಿಪಡಿಸಲು ಕೆಲವು ಕಠಿಣ ಕ್ರಮಗಳನ್ನು ತೆಗೆದುಕೊಳ್ಳುವುದು ಅನಿವಾರ್ಯವಾಗಿತ್ತು ಎಂದು ಅವರು ತಿಳಿಸಿದ್ದಾರೆ.
ನೀಟ್-ಯುಜಿ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣ ರಾಷ್ಟ್ರಮಟ್ಟದಲ್ಲಿ ಭಾರೀ ವಿವಾದಕ್ಕೆ ಕಾರಣವಾಗಿದ್ದು, ಸರ್ಕಾರ ಮತ್ತು ರಾಷ್ಟ್ರೀಯ ಪರೀಕ್ಷಾ ಸಂಸ್ಥೆಯ ವಿರುದ್ಧ ವಿರೋಧ ಪಕ್ಷಗಳು ಹಾಗೂ ವಿದ್ಯಾರ್ಥಿ ಸಂಘಟನೆಗಳು ತೀವ್ರ ಟೀಕೆ ವ್ಯಕ್ತಪಡಿಸಿದ್ದವು.
ಈ ಹಿನ್ನೆಲೆಯಲ್ಲಿ ಪರೀಕ್ಷಾ ಪ್ರಕ್ರಿಯೆಯ ವಿಶ್ವಾಸಾರ್ಹತೆಯನ್ನು ಮರುಸ್ಥಾಪಿಸುವುದು ಸರ್ಕಾರದ ಜವಾಬ್ದಾರಿ ಎಂದು ಧರ್ಮೇಂದ್ರ ಪ್ರಧಾನ ಹೇಳಿದ್ದಾರೆ. ಈ ವಿಷಯದಲ್ಲಿ ಎದ್ದಿರುವ ಟೀಕೆ ಮತ್ತು ಸವಾಲುಗಳನ್ನು ಎದುರಿಸಲು ಸರ್ಕಾರ ಸಿದ್ಧವಾಗಿದೆ. ವ್ಯವಸ್ಥೆಯನ್ನು ಸರಿಪಡಿಸುವುದು ನನ್ನ ಕರ್ತವ್ಯ. ಕಣ್ಣು ಮುಚ್ಚಿಕೊಂಡು ಸಮಸ್ಯೆಯನ್ನು ನಿರ್ಲಕ್ಷಿಸುವುದು ಸರಿಯಲ್ಲ ಎಂದಿದ್ದಾರೆ.