LIVE TV LocalCrimeNationalInternationalPoliticsBusinessFinancialEducationTechnologyEntertainmentSportsHealthFeatureTravelingBeauty
Press & Media Credential Portal
✕
1. Apply for Press ID Card
Register official reporter application with Email OTP.
➔
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
State News

ಆಧುನಿಕ ಭಾರತದ ನಿರ್ಮಾಣಕ್ಕೆ ನೆಹರು ಕೊಡುಗೆ ಅಪಾರ: ಸಿಎಂ

ಬೆಂಗಳೂರು, ನ. 14: ದೇಶದಲ್ಲಿ ಕೈಗಾರಿಕಾ ಕ್ರಾಂತಿ, ಹಸಿರು ಕ್ರಾಂತಿ ಹಾಗೂ ಕ್ಷೀರ ಕ್ರಾಂತಿಗೆ ಬುನಾದಿ ಹಾಕಿದ ಮಾಜಿ ಪ್ರಧಾನಿ ಜವಾಹರಲಾಲ್ ನೆಹರು ಅವರ ಕೊಡುಗೆ ಅಪಾರವಾಗಿದೆ. ಶಿಕ್ಷಣ ಮತ್ತು ಆರೋಗ್ಯ ಕ್ಷೇತ್ರಗಳ ಅಭಿವೃದ್ಧಿಯಲ್ಲಿಯೂ ಅವರ ಪಾತ್ರವನ್ನು ಮರೆಯಲು ಸಾಧ್ಯವಿಲ್ಲ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ ಹೇಳಿದರು.

ಮಾಜಿ ಪ್ರಧಾನಿ ಜವಾಹರಲಾಲ್ ನೆಹರು ಅವರ ಜನ್ಮದಿನದ ಅಂಗವಾಗಿ ಕೆಪಿಸಿಸಿ ಕಚೇರಿಯ ಭಾರತ ಜೋಡೊ ಸಭಾಂಗಣದಲ್ಲಿ ಆಯೋಜಿಸಿದ್ದ ಮಕ್ಕಳ ದಿನಾಚರಣೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ವಿಧಾನಸೌಧಕ್ಕೆ ಶಂಕುಸ್ಥಾಪನೆ ನೆರವೇರಿಸಿದವರು ನೆಹರು. ಡಾ. ಬಿ.ಆರ್. ಅಂಬೇಡ್ಕರ್ ಅವರನ್ನು ಕಾನೂನು ಸಚಿವರನ್ನಾಗಿ ನೇಮಿಸಿ ಸಂವಿಧಾನ ರಚನೆಯ ಮಹತ್ವದ ಜವಾಬ್ದಾರಿ ನೀಡಿದರು. ದೇಶದ ಅಭಿವೃದ್ಧಿಗೆ ಭದ್ರ ಅಡಿಪಾಯ ಹಾಕಿದ ಅವರ ದೂರದೃಷ್ಟಿ ಇಂದಿಗೂ ಮಾದರಿಯಾಗಿದೆ ಎಂದು ತಿಳಿಸಿದರು.

ಮಕ್ಕಳೇ ದೇಶದ ನಿಜವಾದ ಸಂಪತ್ತು. ಅವರ ಶಿಕ್ಷಣವೇ ದೇಶದ ಭವಿಷ್ಯಕ್ಕೆ ಮಾಡುವ ಅತ್ಯುತ್ತಮ ಹೂಡಿಕೆಯಾಗಿದೆ. ಮಕ್ಕಳ ಕನಸುಗಳಲ್ಲಿಯೇ ದೇಶದ ಉಜ್ವಲ ಭವಿಷ್ಯ ಅಡಗಿದೆ. ದೇಶದ ಭವಿಷ್ಯ ಗಟ್ಟಿಯಾಗಬೇಕಾದರೆ ಪ್ರತಿಯೊಂದು ಕುಟುಂಬವೂ ಮಕ್ಕಳ ಶಿಕ್ಷಣ ಮತ್ತು ಬೆಳವಣಿಗೆಗೆ ಪ್ರೋತ್ಸಾಹ ನೀಡಬೇಕು. ನೆಹರು ಅವರಿಗೆ ಮಕ್ಕಳ ಮೇಲೆ ಅಪಾರ ಪ್ರೀತಿಯಿತ್ತು. ನಾಳಿನ ಭಾರತ ನಿಮ್ಮದು ಎಂಬ ಸಂದೇಶವನ್ನು ಅವರು ಮಕ್ಕಳಿಗೆ ನೀಡಿದ್ದರು ಎಂದು ಸ್ಮರಿಸಿದರು.

ಸ್ವಾತಂತ್ರ್ಯ ಹೋರಾಟದ ಸಂದರ್ಭದಲ್ಲಿ ನೆಹರು ಅವರು ತಮ್ಮ ಪುತ್ರಿ ಇಂದಿರಾ ಗಾಂಧಿ ಅವರಿಗೆ ಬರೆದ ಪತ್ರಗಳನ್ನು ಪ್ರತಿಯೊಬ್ಬರೂ ಓದಬೇಕು. ಅವುಗಳಲ್ಲಿ ದೇಶಪ್ರೇಮ, ಇತಿಹಾಸ ಹಾಗೂ ಮಾನವೀಯ ಮೌಲ್ಯಗಳ ಕುರಿತು ಮಹತ್ವದ ವಿಚಾರಗಳಿವೆ. ಅಂಬೇಡ್ಕರ್ ಅವರ ನೇತೃತ್ವದಲ್ಲಿ ರೂಪುಗೊಂಡ ಸಂವಿಧಾನದ ಅಡಿಯಲ್ಲಿ ಇಂದು ದೇಶದ ಆಡಳಿತ ನಡೆಯುತ್ತಿದೆ ಎಂದು ತಿಳಿಸಿದರು.

ಸರ್ದಾರ್ ವಲ್ಲಭಭಾಯಿ ಪಟೇಲ್ ಹಾಗೂ ಜವಾಹರಲಾಲ್ ನೆಹರು ಅವರು ದೇಶ ವಿಭಜನೆಯಾಗದಂತೆ ನೋಡಿಕೊಳ್ಳುವ ಉದ್ದೇಶದಿಂದ ಅಂದಿನ 550ಕ್ಕೂ ಹೆಚ್ಚು ರಾಜಸಂಸ್ಥಾನಗಳನ್ನು ಒಗ್ಗೂಡಿಸಲು ಶ್ರಮಿಸಿದರು. ಆ ಮೂಲಕ ದೇಶದಲ್ಲಿ ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ಬಲಪಡಿಸಿದರು. ಅವರ ಕೊಡುಗೆ ಇಂದಿಗೂ ದೇಶಕ್ಕೆ ಶಕ್ತಿಯಾಗಿದೆ ಎಂದು ಹೇಳಿದರು.

ಮತದಾರರ ಹೆಸರು ಮರುಸೇರ್ಪಡೆಗೆ ಕ್ರಮ: ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ ಹಿನ್ನೆಲೆಯಲ್ಲಿ ಪಕ್ಷವು ಪ್ರತ್ಯೇಕ ತಂತ್ರಾಂಶ ಅಭಿವೃದ್ಧಿಪಡಿಸಿದೆ. ಮತದಾರರ ಪಟ್ಟಿಯಿಂದ ತೆಗೆದುಹಾಕಲಾದ ಅರ್ಹ ಮತದಾರರ ಹೆಸರುಗಳನ್ನು ಮರುಸೇರ್ಪಡೆಗೊಳಿಸಲು ಅಗತ್ಯ ಕ್ರಮ ಕೈಗೊಳ್ಳಬೇಕು. ಈ ನಿಟ್ಟಿನಲ್ಲಿ ಪಕ್ಷದ ಕಾರ್ಯಕರ್ತರು ಸಕ್ರಿಯವಾಗಿ ತೊಡಗಿಸಿಕೊಳ್ಳಬೇಕು. ಮತದಾರರ ಹಕ್ಕುಗಳ ಕುರಿತು ಸಾರ್ವಜನಿಕರಲ್ಲಿ ಅರಿವು ಮೂಡಿಸಲು ಈಗಾಗಲೇ ಜಾಗೃತಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ ಎಂದು ತಿಳಿಸಿದರು.

ನೆಹರು ಅವರು ಪಂಚವಾರ್ಷಿಕ ಯೋಜನೆಗಳ ಮೂಲಕ ದೇಶದ ಆರ್ಥಿಕ ಅಭಿವೃದ್ಧಿಗೆ ಭದ್ರ ಬುನಾದಿ ಹಾಕಿದರು. ಎಚ್‌ಎಂಟಿ, ಐಟಿಐ, ಇಸ್ರೋ ಸೇರಿದಂತೆ ಹಲವು ಸಾರ್ವಜನಿಕ ಉದ್ದಿಮೆಗಳು ಹಾಗೂ ಕೈಗಾರಿಕೆಗಳ ಸ್ಥಾಪನೆಗೆ ಅವರ ದೂರದೃಷ್ಟಿ ಕಾರಣವಾಗಿದೆ. ಬೆಂಗಳೂರನ್ನು ಪ್ರಮುಖ ಕೈಗಾರಿಕಾ ಮತ್ತು ವೈಜ್ಞಾನಿಕ ಕೇಂದ್ರವನ್ನಾಗಿ ರೂಪಿಸುವಲ್ಲಿ ಅವರ ಕೊಡುಗೆಯನ್ನು ಕರ್ನಾಟಕದ ಜನತೆ ಮರೆಯಲು ಸಾಧ್ಯವಿಲ್ಲ ಎಂದು ತಿಳಿಸಿದರು.

ನೆಹರು ಅವರ ದೂರದೃಷ್ಟಿ, ತ್ಯಾಗ ಹಾಗೂ ದೇಶದ ಅಭಿವೃದ್ಧಿಗೆ ನೀಡಿದ ಕೊಡುಗೆಯನ್ನು ವಿಶ್ವವೇ ಶ್ಲಾಘಿಸುತ್ತದೆ. ಸ್ವಾತಂತ್ರ್ಯಾನಂತರ ಭಾರತ ಈ ಮಟ್ಟಕ್ಕೆ ಪ್ರಗತಿ ಸಾಧಿಸಲು ಅವರ ಮಾರ್ಗದರ್ಶನ ಮಹತ್ವದ ಪಾತ್ರ ವಹಿಸಿದೆ. ಅವರ ಚಿಂತನೆಗಳು, ತತ್ವಗಳು ಹಾಗೂ ಸಿದ್ಧಾಂತಗಳು ಇಂದಿಗೂ ನಮಗೆ ದಾರಿದೀಪವಾಗಿವೆ. ಅವುಗಳ ಆಧಾರದಲ್ಲಿಯೇ ನಾವು ಕೆಲಸ ಮಾಡಬೇಕು ಎಂದು ಹೇಳಿದರು.

ನಿಗಮ–ಮಂಡಳಿಗಳ ಎರಡನೇ ಪಟ್ಟಿ ಶೀಘ್ರ: ಪಕ್ಷದ ಕಾರ್ಯಕರ್ತರಿಗೆ ಅಧಿಕಾರದಲ್ಲಿ ಅವಕಾಶ ಕಲ್ಪಿಸುವ ಉದ್ದೇಶದಿಂದ ನಿಗಮ–ಮಂಡಳಿಗಳ ನೇಮಕಾತಿಯ ಮೊದಲ ಪಟ್ಟಿ ಈಗಾಗಲೇ ಪ್ರಕಟಿಸಲಾಗಿದೆ. ಎರಡನೇ ಪಟ್ಟಿಯನ್ನು ಒಂದೆರಡು ದಿನಗಳಲ್ಲಿ ಬಿಡುಗಡೆ ಮಾಡಲಾಗುವುದು. ನಂತರ ಬಾಕಿ ಉಳಿದಿರುವ ಸ್ಥಾನಗಳನ್ನೂ ಪಕ್ಷದ ಕಾರ್ಯಕರ್ತರಿಗೆ ನೀಡಲಾಗುವುದು. ಪಕ್ಷದ ಸಂಘಟನೆ ಬಲಪಡಿಸಲು ಕಾರ್ಯಕರ್ತರಿಗೆ ಹೆಚ್ಚಿನ ಜವಾಬ್ದಾರಿ ನೀಡಲಾಗುತ್ತಿದೆ. ಪಂಚಾಯಿತಿ ಹಾಗೂ ವಾರ್ಡ್ ಮಟ್ಟದಲ್ಲಿ ಭಾರತ ಜೋಡೊ ಯುವ ಸಂಘಗಳಿಗೆ ಸದಸ್ಯರನ್ನು ನೋಂದಾಯಿಸಬೇಕು. ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಗಳಿಗೆ ಈಗಾಗಲೇ 40 ಸಾವಿರ ಮಂದಿಯನ್ನು ನೇಮಿಸಲಾಗಿದ್ದು, ಇನ್ನೂ 20 ಸಾವಿರ ಸದಸ್ಯರ ನೇಮಕ ಪ್ರಕ್ರಿಯೆ ನಡೆಯುತ್ತಿದೆ ಎಂದು ಶಿವಕುಮಾರ ತಿಳಿಸಿದರು.

ಇದಕ್ಕೂ ಮೊದಲು ವಿಧಾನಸೌಧದ ಆವರಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಮುಖ್ಯಮಂತ್ರಿ, ಶಿಕ್ಷಣ, ವಿಜ್ಞಾನ, ತಂತ್ರಜ್ಞಾನ, ವಿದ್ಯುತ್ ಉತ್ಪಾದನೆ ಹಾಗೂ ನೀರಾವರಿ ಕ್ಷೇತ್ರಗಳಲ್ಲಿ ನೆಹರು ಅವರು ದೂರದೃಷ್ಟಿಯಿಂದ ರೂಪಿಸಿದ ಯೋಜನೆಗಳು ಇಂದಿಗೂ ದೇಶದ ಅಭಿವೃದ್ಧಿಗೆ ನೆರವಾಗುತ್ತಿವೆ ಎಂದರು.

ಪಂಚವಾರ್ಷಿಕ ಯೋಜನೆಗಳ ಮೂಲಕ ಉದ್ಯೋಗ ಸೃಷ್ಟಿ ಮತ್ತು ಕೈಗಾರಿಕಾ ಅಭಿವೃದ್ಧಿಗೆ ಹೊಸ ದಿಕ್ಕು ನೀಡಿದರು. 1955ರಲ್ಲಿಯೇ ಕಂಪ್ಯೂಟರ್ ಯುಗದ ಕುರಿತು ಚಿಂತನೆ ನಡೆಸಿದ್ದ ಅವರ ದೂರದೃಷ್ಟಿಯನ್ನು ಮರೆಯಲು ಸಾಧ್ಯವಿಲ್ಲ. ಮಹಿಳೆಯರ ರಕ್ಷಣೆಗಾಗಿ ವರದಕ್ಷಿಣೆ ನಿಷೇಧ ಕಾನೂನು ಜಾರಿಗೆ ತಂದ ಕೊಡುಗೆಯನ್ನೂ ಸ್ಮರಿಸಬೇಕು ಎಂದು ಹೇಳಿದರು.

ಕರ್ನಾಟಕದ ಅಭಿವೃದ್ಧಿಯಲ್ಲಿಯೂ ನೆಹರು ಅವರ ಪಾತ್ರ ಮಹತ್ವದ್ದಾಗಿದೆ. ವಿಶೇಷವಾಗಿ ತುಂಗಭದ್ರ ಅಣೆಕಟ್ಟು ನಿರ್ಮಾಣಕ್ಕೆ ಅನುದಾನ ಒದಗಿಸುವ ಮೂಲಕ ರಾಜ್ಯದ ನೀರಾವರಿ ಅಭಿವೃದ್ಧಿಗೆ ನೆರವಾದರು. ದೇಶದ ಪ್ರಗತಿಗೆ ಅವರು ಹಾಕಿಕೊಟ್ಟ ಅಡಿಪಾಯವನ್ನು ಮುಂದುವರಿಸಿಕೊಂಡು ಹೋಗುವುದು ನಮ್ಮೆಲ್ಲರ ಜವಾಬ್ದಾರಿಯಾಗಿದೆ ಎಂದು ಶಿವಕುಮಾರ ತಿಳಿಸಿದರು.

Author
A B Dharwadkar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST