LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureEditorialBeautyRecipes

ಹೊಸ ಸಿಎಂ ತಾತ್ಕಾಲಿಕ ಮಾತ್ರ, ಅವಧಿ ಪೂರ್ವ ಚುನಾವಣೆ ಖಚಿತ: ವಿಜಯೇಂದ್ರ

ಶಿವಮೊಗ್ಗ, ಮೇ 27 : ರಾಜ್ಯದಲ್ಲಿ ಹೊಸ ಮುಖ್ಯಮಂತ್ರಿ ಅಧಿಕಾರಕ್ಕೆ ಬಂದರೂ ಅದು ಕೇವಲ ತಾತ್ಕಾಲಿಕ ವ್ಯವಸ್ಥೆಯಾಗಿದ್ದು, ರಾಜ್ಯದಲ್ಲಿ ಅವಧಿ ಪೂರ್ವ ಚುನಾವಣೆ ನಡೆಯುವುದು ನಿಶ್ಚಿತ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಭವಿಷ್ಯ ನುಡಿದರು.

ಶಿವಮೊಗ್ಗದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಕಳೆದ ಮೂರು ವರ್ಷಗಳಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಉತ್ತಮ ಆಡಳಿತ ನೀಡುವಲ್ಲಿ ಸಂಪೂರ್ಣ ವಿಫಲರಾಗಿದ್ದಾರೆ ಎಂದು ಆರೋಪಿಸಿದರು.

ದೆಹಲಿಯಲ್ಲಿ ನಡೆದ ಮ್ಯಾರಥಾನ್ ಸಭೆಯಲ್ಲಿ ಮುಖ್ಯಮಂತ್ರಿ ರಾಜೀನಾಮೆ ಕುರಿತು ಕಾಂಗ್ರೆಸ್ ಹೈಕಮಾಂಡ್ ತೀರ್ಮಾನ ಕೈಗೊಂಡಿದೆ ಎಂದು ಅವರು ಹೇಳಿದರು.

ಸಿದ್ದರಾಮಯ್ಯ ಇಂದು ಅಥವಾ ನಾಳೆ ರಾಜೀನಾಮೆ ನೀಡಬಹುದು. ಆದರೆ ಅವರ ನಂತರ ಯಾರು ಮುಖ್ಯಮಂತ್ರಿ ಆಗುತ್ತಾರೆ ಎಂಬುದು ಮುಖ್ಯವಲ್ಲ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಬಗ್ಗೆ ನನಗೆ ವೈಯಕ್ತಿಕ ದ್ವೇಷ ಇಲ್ಲ. ಅವರು ಅತ್ಯಂತ ಅನುಭವ ಹೊಂದಿದ ನಾಯಕರು. ಆದರೆ ದಕ್ಷಿಣ ಭಾರತದ ಇತರ ರಾಜ್ಯಗಳೊಂದಿಗೆ ಹೋಲಿಕೆ ಮಾಡಿದರೆ ಕರ್ನಾಟಕದಲ್ಲಿ 10 ಲಕ್ಷ ಕೋಟಿ ರೂ. ಸಾಲ ಮಾಡುವ ಪರಿಸ್ಥಿತಿ ನಿರ್ಮಾಣವಾಗಿದೆ ಎಂದು ವಿಜಯೇಂದ್ರ ಟೀಕಿಸಿದರು.

ಉಪಚುನಾವಣೆಯ ಗೆಲುವು ಮುಖ್ಯಮಂತ್ರಿ ಸ್ಥಾನ ಉಳಿಸಿಕೊಳ್ಳಲು ಮಾನದಂಡವಾಗುವುದಿಲ್ಲ. ಅದು ಮಾನದಂಡವಾಗಿದ್ದರೆ ಇಂದು ಮುಖ್ಯಮಂತ್ರಿ ಬದಲಾವಣೆ ಕುರಿತು ಚರ್ಚೆಯೇ ನಡೆಯುತ್ತಿರಲಿಲ್ಲ ಎಂದು ಹೇಳಿದರು.

ಸಿದ್ದರಾಮಯ್ಯ ರಾಜೀನಾಮೆ ನೀಡಿ ಯಾರೇ ಮುಖ್ಯಮಂತ್ರಿ ಆದರೂ ಅದು ತಾತ್ಕಾಲಿಕ ವ್ಯವಸ್ಥೆಯಾಗಿರುತ್ತದೆ. ರಾಜ್ಯದಲ್ಲಿ ಅವಧಿ ಪೂರ್ವ ಚುನಾವಣೆ ನಡೆಯುವುದನ್ನು ಯಾರಿಂದಲೂ ತಡೆಯಲು ಸಾಧ್ಯವಿಲ್ಲ ಎಂದು ವಿಜಯೇಂದ್ರ ಹೇಳಿದರು.

ಮುಂದಿನ ಚುನಾವಣೆಗೆ ಬಿಜೆಪಿ ಸಂಘಟನೆ ಬಲಪಡಿಸಿ ಸಜ್ಜಾಗಲಿದೆ. ಜನರ ಮುಂದೆ ನಮ್ಮ ಕೆಲಸದ ಆಧಾರದ ಮೇಲೆ ಹೋಗುತ್ತೇವೆ. ಕಾಂಗ್ರೆಸ್ ಸರ್ಕಾರದ ಆಡಳಿತ ವೈಫಲ್ಯ ನಮಗೆ ಬೋನಸ್‌ನಂತಾಗಿದೆ ಎಂದು ಹೇಳಿದರು.

ಮುಖ್ಯಮಂತ್ರಿ ಸಿದ್ದರಾಮಯ್ಯ ಅಷ್ಟು ಸುಲಭವಾಗಿ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡುತ್ತಾರೆ ಎಂದು ನನಗೆ ಅನಿಸುವುದಿಲ್ಲ. ಆದರೆ ಹೈಕಮಾಂಡ್ ತೀರ್ಮಾನ ಮಾಡಿದ ಹಿನ್ನೆಲೆಯಲ್ಲಿ ಅವರಿಗೆ ರಾಜೀನಾಮೆ ನೀಡುವ ಅನಿವಾರ್ಯತೆ ಎದುರಾಗಬಹುದು. ಅಂತಿಮವಾಗಿ ಯಾರು ಮುಖ್ಯಮಂತ್ರಿ ಆಗುತ್ತಾರೆ ಎಂಬುದು ಭಗವಂತನಿಗೇ ಗೊತ್ತು ಎಂದು ವಿಜಯೇಂದ್ರ ಹೇಳಿದರು.

Author
A B Dharwadkar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST