ಬೆಂಗಳೂರು, ಜೂ. 12 : ಧರ್ಮಸ್ಥಳ ಶ್ರೀ ಮಂಜುನಾಥೇಶ್ವರ ಸ್ವಾಮಿಯ ಸನ್ನಿಧಿಯ ಪ್ರತಿಷ್ಠೆಗೆ ಧಕ್ಕೆ ತರುವ ಉದ್ದೇಶದಿಂದ ದೊಡ್ಡ ಮಟ್ಟದ ಷಡ್ಯಂತ್ರ ನಡೆದಿತ್ತು. ಹಿಂದೂಗಳ ಧಾರ್ಮಿಕ ನಂಬಿಕೆ ಮತ್ತು ಶ್ರದ್ಧೆಗೆ ಪೆಟ್ಟು ನೀಡುವ ಪ್ರಯತ್ನದ ಹಿಂದೆ ಯಾರು ಇದ್ದರು ಎಂಬುದು ಬಹಿರಂಗವಾಗಬೇಕು ಎಂದು ರಾಜ್ಯ ಬಿಜೆಪಿ ಅಧ್ಯಕ್ಷ ಹಾಗೂ ಶಾಸಕ ಬಿ.ವೈ.ವಿಜಯೇಂದ್ರ ಆಗ್ರಹಿಸಿದರು.
ನಗರದ ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಗುರುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಧರ್ಮಸ್ಥಳ ಪ್ರಕರಣದಲ್ಲಿ ಅಂದಿನ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಯಾವುದೇ ಸಮಗ್ರ ಪರಾಮರ್ಶೆ ನಡೆಸದೆ ಎಸ್ಐಟಿ ತನಿಖೆಗೆ ಆದೇಶಿಸಿದ್ದು ಹಲವು ಅನುಮಾನಗಳಿಗೆ ಕಾರಣವಾಗಿತ್ತು ಎಂದು ಆರೋಪಿಸಿದರು.
ಧರ್ಮಸ್ಥಳ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗ ಹಲವು ಸಂಗತಿಗಳು ಬೆಳಕಿಗೆ ಬರುತ್ತಿವೆ. ಒಂದು ದಿನ ಮೊದಲು ತನಿಖೆಯ ಅಗತ್ಯವಿಲ್ಲ ಎಂದು ಹೇಳಿದ್ದ ಮುಖ್ಯಮಂತ್ರಿ, ಬಳಿಕ ಕೆಲ ಪಟ್ಟಭದ್ರ ಹಿತಾಸಕ್ತಿಗಳ ಭೇಟಿಯ ನಂತರ ಏಕಾಏಕಿ ಎಸ್ಐಟಿ ತನಿಖೆಗೆ ಆದೇಶಿಸಿದ್ದರು. ಈ ಬೆಳವಣಿಗೆ ಸಾಕಷ್ಟು ಪ್ರಶ್ನೆಗಳನ್ನು ಹುಟ್ಟುಹಾಕಿತ್ತು ಎಂದು ಅವರು ಹೇಳಿದರು.
ಈ ಪ್ರಕರಣದಲ್ಲಿ ನೂರಾರು ಕೋಟಿ ರೂಪಾಯಿಗಳ ವ್ಯವಹಾರ ಅಡಕವಾಗಿರುವ ಬಗ್ಗೆ ಮಾಹಿತಿ ಹೊರಬರುತ್ತಿದೆ. ಹೀಗಾಗಿ ಇದರ ಹಿಂದೆ ವಿದೇಶಿ ಶಕ್ತಿಗಳ ಕೈವಾಡ ಇದೆಯೇ ಎಂಬ ಬಗ್ಗೆಯೂ ತನಿಖೆ ನಡೆಸಬೇಕು ಎಂದು ವಿಜಯೇಂದ್ರ ಒತ್ತಾಯಿಸಿದರು.
ಇಂತಹ ಷಡ್ಯಂತ್ರಗಳಿಗೆ ಕಾಂಗ್ರೆಸ್ ಸರಕಾರ ಬಲ ತುಂಬುವ ಕೆಲಸ ಮಾಡಿದೆ ಎಂಬ ನೋವು ನಮಗಿದೆ. ಇದರ ಹಿಂದೆ ಯಾರು ಇದ್ದರು, ಯಾರು ಹಣ ಹೂಡಿಕೆ ಮಾಡಿದ್ದರು ಹಾಗೂ ಅಂದಿನ ಮುಖ್ಯಮಂತ್ರಿ ಯಾವ ಕಾರಣಕ್ಕೆ ಕಣ್ಮುಚ್ಚಿ ಎಸ್ಐಟಿ ತನಿಖೆಗೆ ಒಪ್ಪಿಗೆ ನೀಡಿದರು ಎಂಬ ಎಲ್ಲ ಪ್ರಶ್ನೆಗಳಿಗೆ ಉತ್ತರ ಸಿಗಬೇಕು ಎಂದು ಹೇಳಿದರು.
ಮತದಾರರ ಪಟ್ಟಿ ಸಮಗ್ರ ಪರಿಷ್ಕರಣೆ ಕುರಿತು ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, ಕೇಂದ್ರ ಚುನಾವಣಾ ಆಯೋಗದ ನಿರ್ದೇಶನದಂತೆ ಪ್ರಕ್ರಿಯೆ ನಡೆಯುತ್ತಿದ್ದು, ಅದಕ್ಕೆ ರಾಜ್ಯ ಸರಕಾರ ಅಡ್ಡಿಪಡಿಸುವ ಕೆಲಸ ಮಾಡುತ್ತಿದೆ ಎಂಬ ಅಭಿಪ್ರಾಯ ಪಕ್ಷದ ಮುಖಂಡರಲ್ಲಿ ವ್ಯಕ್ತವಾಗಿದೆ ಎಂದರು.
ಬೂತ್ ಮಟ್ಟದ ಅಧಿಕಾರಿಗಳಿಗೆ ಸಮರ್ಪಕ ಮಾರ್ಗದರ್ಶನ ಮತ್ತು ಸೂಚನೆಗಳನ್ನು ನೀಡಲಾಗುತ್ತಿಲ್ಲ. ಮತದಾರರ ಪಟ್ಟಿಯಿಂದ ಮೃತರ ಹೆಸರುಗಳು ಹಾಗೂ ನಕಲಿ ದಾಖಲೆಗಳನ್ನು ತೆಗೆದುಹಾಕುವ ಕಾರ್ಯ ಸಮರ್ಪಕವಾಗಿ ನಡೆಯಬೇಕಾಗಿದೆ. ಆದರೆ ಅಧಿಕಾರಿಗಳನ್ನು ದುರುಪಯೋಗಪಡಿಸಿಕೊಂಡು ಮತದಾರರ ಪಟ್ಟಿ ಶುದ್ಧೀಕರಣ ಪ್ರಕ್ರಿಯೆಯನ್ನು ಪರಿಣಾಮಕಾರಿಯಾಗಿ ನಡೆಸಲಾಗುತ್ತಿಲ್ಲ ಎಂಬ ಆಕ್ಷೇಪಗಳು ಕೇಳಿಬರುತ್ತಿವೆ ಎಂದು ವಿಜಯೇಂದ್ರ ಹೇಳಿದರು.