ಹೊಸದಿಲ್ಲಿ, ಜುಲೈ 22: ನೀಟ್ ಪರೀಕ್ಷೆಯಲ್ಲಿನ ಅಕ್ರಮಗಳ ಹೊಣೆ ಹೊತ್ತು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ ರಾಜೀನಾಮೆ ನೀಡಬೇಕೆಂದು ಆಗ್ರಹಿಸಿ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ನಡೆಸಿದ ಪ್ರತಿಭಟನೆ ವೇಳೆ ವಿದ್ಯಾರ್ಥಿಗಳ ಮೇಲೆ ದೆಹಲಿ ಪೊಲೀಸರು ನಡೆಸಿದ ಲಾಠಿಚಾರ್ಜ ಕ್ರಮವನ್ನು ಪ್ರಶ್ನಿಸಿ ಸಲ್ಲಿಸಲಾದ ಅರ್ಜಿಯ ತುರ್ತು ವಿಚಾರಣೆಗೆ ಸುಪ್ರೀಂ ಕೋರ್ಟ ಬುಧವಾರ ನಿರಾಕರಿಸಿದೆ.
ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ್ ಹಾಗೂ ನ್ಯಾಯಮೂರ್ತಿಗಳಾದ ಜೋಯ್ಮಲ್ಯ ಬಾಗ್ಚಿ ಮತ್ತು ವಿ. ಮೋಹನ ಅವರನ್ನು ಒಳಗೊಂಡ ಪೀಠದ ಮುಂದೆ ಅರ್ಜಿದಾರರ ಪರ ವಕೀಲರು ಪ್ರಕರಣವನ್ನು ತುರ್ತಾಗಿ ವಿಚಾರಣೆಗೆ ಕೈಗೆತ್ತಿಕೊಳ್ಳುವಂತೆ ಮನವಿ ಮಾಡಿದರು.
ಪ್ರತಿಭಟನಾಕಾರರ ಮೇಲೆ ಪೊಲೀಸರು ನಡೆಸಿದ ದೌರ್ಜನ್ಯಕ್ಕೆ ಸಂಬಂಧಿಸಿದ ವಿಡಿಯೊ ಪುರಾವೆಗಳು ತಮ್ಮ ಬಳಿ ಇವೆ ಎಂದು ವಕೀಲರು ನ್ಯಾಯಪೀಠದ ಗಮನಕ್ಕೆ ತಂದರು. ಆದರೆ, "ನಮ್ಮ ಸಮಯವನ್ನು ವ್ಯರ್ಥ ಮಾಡಬೇಡಿ; ನಿಮ್ಮ ಸಮಯವನ್ನೂ ಹಾಳು ಮಾಡಿಕೊಳ್ಳಬೇಡಿ. ನಾವು ಯಾವುದೇ ವಿಡಿಯೊಗಳನ್ನು ವೀಕ್ಷಿಸುವುದಿಲ್ಲ ಮತ್ತು ಅದಕ್ಕೆ ಸಮಯವೂ ಇಲ್ಲ" ಎಂದು ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ್ ಹೇಳಿದರು.
ವಿದ್ಯಾರ್ಥಿಗಳ ಮೇಲೆ ಬಲಪ್ರಯೋಗ ನಡೆಸಲಾಗಿದೆ ಎಂದು ವಕೀಲರು ಪುನರುಚ್ಚರಿಸಿ, ವಿಡಿಯೊ ಸಾಕ್ಷ್ಯಗಳನ್ನು ಪರಿಶೀಲಿಸುವಂತೆ ಮತ್ತೊಮ್ಮೆ ಕೋರಿದರೂ, ನ್ಯಾಯಪೀಠ ತನ್ನ ನಿಲುವನ್ನು ಬದಲಿಸಲಿಲ್ಲ.
ಸಂಸತ್ತಿನ ಮುಂಗಾರು ಅಧಿವೇಶನದ ಮೊದಲ ದಿನವಾದ ಸೋಮವಾರ ಸಿಜೆಪಿ ಹಮ್ಮಿಕೊಂಡಿದ್ದ 'ಸಂಸತ್ ಚಲೋ' ಪ್ರತಿಭಟನಾ ಮೆರವಣಿಗೆಯ ವೇಳೆ ನಡೆದ ಪೊಲೀಸ್ ಕ್ರಮವನ್ನು ಪ್ರಶ್ನಿಸಿ ಈ ಅರ್ಜಿ ಸಲ್ಲಿಸಲಾಗಿತ್ತು.
ನೀಟ್ ಪರೀಕ್ಷೆಯಲ್ಲಿ ವ್ಯಾಪಕ ಅಕ್ರಮಗಳು ನಡೆದಿವೆ ಎಂದು ಆರೋಪಿಸಿರುವ ಸಾವಿರಾರು ವಿದ್ಯಾರ್ಥಿಗಳು ಮತ್ತು ಯುವಕರು ದೆಹಲಿಯಲ್ಲಿ ಪ್ರತಿಭಟನೆ ನಡೆಸಿ, ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿದ್ದರು.