ವಿಜಯಪುರ, ಅ. 8 (ಸಮದರ್ಶಿ ಸುದ್ದಿ): ಜೀವಂತವಾಗಿರುವ 8 ಮತದಾರರನ್ನು ಮೃತಪಟ್ಟಿದ್ದಾರೆಂದು ಬಿಂಬಿಸಿ, ನಕಲಿ ಮರಣ ಪ್ರಮಾಣಪತ್ರಗಳ ಆಧಾರದಲ್ಲಿ ಅವರ ಹೆಸರುಗಳನ್ನು ಮತದಾರರ ಪಟ್ಟಿಯಿಂದ ತೆಗೆದುಹಾಕಲು ಯತ್ನಿಸಿದ ಆರೋಪದ ಮೇಲೆ ಶಾಸಕ ಬಸನಗೌಡ ಪಾಟೀಲ ಯತ್ನಾಳ ಸೇರಿದಂತೆ ಮೂವರ ವಿರುದ್ಧ ವಿಜಯಪುರದ ಜಲನಗರ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ.
ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆ ಕುರಿತು ದೇಶಾದ್ಯಂತ ವಿವಾದ ಹಾಗೂ ಪ್ರತಿಭಟನೆಗಳು ನಡೆಯುತ್ತಿರುವ ಬೆನ್ನಲ್ಲೇ ಈ ಪ್ರಕರಣ ಬೆಳಕಿಗೆ ಬಂದಿದೆ.
ವಿಜಯಪುರ ನಗರದ ಬಾಗವಾನ ಕಾಲೋನಿ ನಿವಾಸಿ ಅಬ್ದುಲ್ ರಝಾಕ್ ಮೌಲಾಸಾಬ ನೀಡಿದ ದೂರಿನ ಆಧಾರದಲ್ಲಿ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ. ಜೀವಂತವಾಗಿರುವ ತಮ್ಮನ್ನೂ ಸೇರಿದಂತೆ ಒಟ್ಟು 8 ಮತದಾರರನ್ನು ಮೃತಪಟ್ಟಿದ್ದಾರೆಂದು ತೋರಿಸಿ ನಕಲಿ ಮರಣ ಪ್ರಮಾಣಪತ್ರಗಳನ್ನು ಸಿದ್ಧಪಡಿಸಲಾಗಿದೆ ಎಂದು ಅವರು ಆರೋಪಿಸಿದ್ದಾರೆ.
ಶಾಸಕ ಬಸನಗೌಡ ಪಾಟೀಲ ಯತ್ನಾಳ ಹಾಗೂ ಅವರ ಬೆಂಬಲಿಗರು ಸೆಪ್ಟೆಂಬರ್ 3ರಂದು ಶಾಸಕರ ಅಧಿಕೃತ ಲೆಟರ್‌ಹೆಡ್ ಬಳಸಿ ವಿಜಯಪುರ ಮಹಾನಗರ ಪಾಲಿಕೆ ಆಯುಕ್ತರಿಗೆ ಅರ್ಜಿ ಸಲ್ಲಿಸಿದ್ದರು. ಅದರಲ್ಲಿ 8 ಮಂದಿ ಮೃತಪಟ್ಟಿದ್ದಾರೆಂದು ಉಲ್ಲೇಖಿಸಿ, ಅವರ ಹೆಸರುಗಳನ್ನು ಮತದಾರರ ಪಟ್ಟಿಯಿಂದ ಕೈಬಿಡುವಂತೆ ಕೋರಲಾಗಿತ್ತು ಎಂದು ದೂರಿನಲ್ಲಿ ವಿವರಿಸಲಾಗಿದೆ.
ಈ ಪ್ರಕರಣಕ್ಕೆ ಸಂಬಂಧಿಸಿದ ಮರಣ ಪ್ರಮಾಣಪತ್ರಗಳನ್ನು ‘ದಿ ನ್ಯೂ ಇಂಡಿಯನ್ ಎಕ್ಸ್‌ಪ್ರೆಸ್’ ಸ್ವತಂತ್ರವಾಗಿ ಪರಿಶೀಲಿಸಿ ವರದಿ ಪ್ರಕಟಿಸಿದ ಬಳಿಕ ಅಬ್ದುಲ್ ರಝಾಕ್ ಪೊಲೀಸರಿಗೆ ದೂರು ಸಲ್ಲಿಸಿದ್ದಾರೆ.
ದೂರಿನ ಆಧಾರದಲ್ಲಿ ಶಾಸಕ ಯತ್ನಾಳ ಸೇರಿದಂತೆ ಮೂವರ ವಿರುದ್ಧ ಎಫ್‌ಐಆರ್ ದಾಖಲಿಸಿರುವ ಜಲನಗರ ಠಾಣೆ ಪೊಲೀಸರು, ಆರೋಪಗಳ ಕುರಿತು ಮುಂದಿನ ತನಿಖೆ ಕೈಗೊಂಡಿದ್ದಾರೆ.