LIVE TV LocalCrimeNationalInternationalPoliticsBusinessFinancialEducationTechnologyEntertainmentSportsHealthFeatureTravelingBeauty
Press & Media Credential Portal
✕
1. Apply for Press ID Card
Register official reporter application with Email OTP.
➔
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
Local News

ಬೆಳಗಾವಿ ಅಧಿವೇಶನಕ್ಕೆ ಪ್ರತಿಭಟನೆಗಳ ಬಿಸಿ: 150ಕ್ಕೂ ಹೆಚ್ಚು ಸಂಘಟನೆಗಳು ಸಜ್ಜು

ಬೆಳಗಾವಿ, ನ. 23: ಡಿಸೆಂಬರ್ 2ರಿಂದ ನಗರದ ಸುವರ್ಣ ವಿಧಾನಸೌಧದಲ್ಲಿ ಆರಂಭವಾಗಲಿರುವ ವಿಧಾನಮಂಡಲದ ಚಳಿಗಾಲದ ಅಧಿವೇಶನಕ್ಕೆ ಈ ಬಾರಿಯೂ ಪ್ರತಿಭಟನೆಗಳ ಬಿಸಿ ತಟ್ಟುವ ಸಾಧ್ಯತೆಯಿದ್ದು, ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ 150ಕ್ಕೂ ಹೆಚ್ಚು ಸಂಘಟನೆಗಳು ಹೋರಾಟ ನಡೆಸಲು ಸಜ್ಜಾಗಿವೆ.

ರೈತರು, ಕಾರ್ಮಿಕರು, ಸರ್ಕಾರಿ ನೌಕರರು, ವಕೀಲರು, ವಿದ್ಯಾರ್ಥಿಗಳು ಸೇರಿದಂತೆ ವಿವಿಧ ಸಂಘಟನೆಗಳು ಸರ್ಕಾರದ ಗಮನ ಸೆಳೆಯಲು ಸಿದ್ಧತೆ ನಡೆಸಿವೆ. ಈಗಾಗಲೇ 58 ಸಂಘಟನೆಗಳು ಪ್ರತಿಭಟನೆಗೆ ಅನುಮತಿ ಕೋರಿ ಜಿಲ್ಲಾಡಳಿತಕ್ಕೆ ಅರ್ಜಿ ಸಲ್ಲಿಸಿದ್ದು, ಅಧಿವೇಶನದ ಅವಧಿಯಲ್ಲಿ 150ಕ್ಕೂ ಹೆಚ್ಚು ಸಂಘಟನೆಗಳು ಹೋರಾಟ ನಡೆಸುವ ನಿರೀಕ್ಷೆಯಿದೆ.

ಕಬ್ಬಿನ ದರ, ಮೀಸಲಾತಿ ಪ್ರಮುಖ ಬೇಡಿಕೆ

ಕಬ್ಬು ಬೆಳೆಗಾರರ ಸಮಸ್ಯೆ ಈ ಬಾರಿಯ ಅಧಿವೇಶನದಲ್ಲೂ ಪ್ರಮುಖವಾಗಿ ಪ್ರಸ್ತಾಪವಾಗುವ ಸಾಧ್ಯತೆಯಿದೆ. ಪ್ರತಿ ಟನ್ ಕಬ್ಬಿಗೆ 3,850 ರೂ. ದರ ನಿಗದಿಪಡಿಸುವುದರ ಜತೆಗೆ ರಾಜ್ಯ ಸರ್ಕಾರ 1,000 ರೂ. ಪ್ರೋತ್ಸಾಹಧನ ನೀಡಬೇಕು ಎಂಬುದು ರೈತರ ಪ್ರಮುಖ ಬೇಡಿಕೆಯಾಗಿದೆ.

ಹಿಂದಿನ ಹೋರಾಟದ ಬಳಿಕ ಕಬ್ಬಿನ ದರದ ವಿಚಾರದಲ್ಲಿ ತಾತ್ಕಾಲಿಕ ಪರಿಹಾರ ದೊರೆತಿದ್ದರೂ ಹಲವು ಬೇಡಿಕೆಗಳು ಈಡೇರಿಲ್ಲ ಎಂಬ ಅಸಮಾಧಾನ ರೈತರಲ್ಲಿದೆ. ಬೆಳೆ ನಷ್ಟ ಪರಿಹಾರ ಹಾಗೂ ಸಾಲ ಮನ್ನಾ ವಿಷಯಗಳನ್ನು ಮುಂದಿಟ್ಟುಕೊಂಡು ಪ್ರತಿಭಟನೆ ನಡೆಸಲು ರೈತ ಸಂಘಟನೆಗಳು ಸಿದ್ಧತೆ ನಡೆಸಿವೆ.

ಪಂಚಮಸಾಲಿ ಸಮುದಾಯಕ್ಕೆ 2ಎ ಮೀಸಲಾತಿ ಕಲ್ಪಿಸಬೇಕೆಂಬ ಬೇಡಿಕೆಯೂ ಮತ್ತೊಮ್ಮೆ ಮುನ್ನೆಲೆಗೆ ಬರುವ ಸಾಧ್ಯತೆಯಿದೆ. ವಕೀಲರ ಮೇಲಿನ ಹಲ್ಲೆಗಳನ್ನು ತಡೆಗಟ್ಟಲು ರಕ್ಷಣಾ ಕಾಯ್ದೆಯನ್ನು ಬಲಪಡಿಸುವಂತೆ ವಕೀಲರ ಸಂಘಟನೆಗಳು ಒತ್ತಾಯಿಸಲಿವೆ.

ಅತಿಥಿ ಉಪನ್ಯಾಸಕರು ಹಾಗೂ ಶಿಕ್ಷಣ ಇಲಾಖೆಯ ನೌಕರರು ಸೇವಾ ಭದ್ರತೆಗೆ ಆಗ್ರಹಿಸಿ ಹೋರಾಟ ನಡೆಸಲು ಮುಂದಾಗಿದ್ದಾರೆ. ಅಂಗನವಾಡಿ ಕಾರ್ಯಕರ್ತೆಯರು ಮತ್ತು ಬಿಸಿಯೂಟ ಸಿಬ್ಬಂದಿ ಗೌರವಧನ ಹೆಚ್ಚಳಕ್ಕೆ ಒತ್ತಾಯಿಸಲಿದ್ದಾರೆ.

ಶಾಲೆಗಳಲ್ಲಿ ಬಿಸಿಯೂಟವನ್ನು ಆಯಾ ಶಾಲೆಗಳಲ್ಲೇ ತಯಾರಿಸುವ ವ್ಯವಸ್ಥೆ ಮುಂದುವರಿಸಬೇಕು ಹಾಗೂ ಕ್ಲಸ್ಟರ್ ಕಿಚನ್ ಯೋಜನೆಯನ್ನು ಕೈಬಿಡಬೇಕು ಎಂಬ ಬೇಡಿಕೆಯೂ ಪ್ರತಿಭಟನೆಯಲ್ಲಿ ಪ್ರಮುಖವಾಗಿ ಕೇಳಿಬರುವ ನಿರೀಕ್ಷೆಯಿದೆ.

ಭದ್ರತೆಗೆ 7 ಸಾವಿರ ಪೊಲೀಸರು

ಅಧಿವೇಶನದ ಹಿನ್ನೆಲೆಯಲ್ಲಿ ಸುವರ್ಣ ವಿಧಾನಸೌಧ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಕೈಗೊಳ್ಳಲು ಸಿದ್ಧತೆ ನಡೆದಿದೆ. ಭದ್ರತೆಗಾಗಿ 7 ಸಾವಿರಕ್ಕೂ ಹೆಚ್ಚು ಪೊಲೀಸ್ ಸಿಬ್ಬಂದಿಯನ್ನು ನಿಯೋಜಿಸಲು ಯೋಜಿಸಲಾಗಿದೆ.

ಸುವರ್ಣ ವಿಧಾನಸೌಧದ ಸುತ್ತಲಿನ 2 ಕಿ.ಮೀ. ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಲು ಉದ್ದೇಶಿಸಲಾಗಿದೆ ಎಂದು ನಗರ ಪೊಲೀಸ್ ಆಯುಕ್ತರು ತಿಳಿಸಿದ್ದಾರೆ.

ಹತ್ತು ದಿನಗಳ ಕಾಲ ನಡೆಯಲಿರುವ ಅಧಿವೇಶನದಲ್ಲಿ ಉತ್ತರ ಕರ್ನಾಟಕದ ಅಭಿವೃದ್ಧಿ, ರೈತರ ಸಮಸ್ಯೆಗಳು ಹಾಗೂ ವಿವಿಧ ಸಮುದಾಯಗಳ ಬೇಡಿಕೆಗಳು ಚರ್ಚೆಗೆ ಬರುವ ನಿರೀಕ್ಷೆಯಿದೆ. ಒಂದೆಡೆ ಸದನದ ಕಲಾಪ, ಮತ್ತೊಂದೆಡೆ ವಿವಿಧ ಸಂಘಟನೆಗಳ ಪ್ರತಿಭಟನೆಗಳು ಸರ್ಕಾರಕ್ಕೆ ಸವಾಲಾಗುವ ಸಾಧ್ಯತೆಯಿದೆ.

Author
A B Dharwadkar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST