LIVE TV LocalCrimeNationalInternationalPoliticsFinancialEducationTechnologyEntertainmentSportsHealthFeatureTravelingBeautyRecipes
State News

ಎಸ್‌ಐಆರ್‌ : ಇಂದು ಬೆಂಗಳೂರಿನಲ್ಲಿ ರಾಜ್ಯಮಟ್ಟದ ಇಂಡಿಯಾ ಸಭೆ

ಬೆಂಗಳೂರು, ಅ.15 (ಸಮದರ್ಶಿ ಸುದ್ದಿ): ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆ ವಿರುದ್ಧ ಹೋರಾಟ ತೀವ್ರಗೊಳಿಸಲು ಮುಂದಾಗಿರುವ ‘ಇಂಡಿಯಾ’ ಮೈತ್ರಿಕೂಟವು ಅ.16ರಂದು ಬೆಂಗಳೂರಿನ ಶಾಸಕರ ಭವನದಲ್ಲಿ ರಾಜ್ಯಮಟ್ಟದ ಸಭೆ ಆಯೋಜಿಸಿದೆ.

‘ಮತ ಉಳಿಸಿ–ದೇಶ ಉಳಿಸಿ’ ಘೋಷವಾಕ್ಯದಡಿ ಬೆಳಿಗ್ಗೆ 10 ಗಂಟೆಗೆ ನಡೆಯಲಿರುವ ಸಭೆಯಲ್ಲಿ ಸಿಪಿಐ(ಎಂ), ಸಿಪಿಐ(ಎಂಎಲ್‌), ಸಮಾಜವಾದಿ ಪಕ್ಷ ಸೇರಿದಂತೆ ಮೈತ್ರಿಕೂಟದ ವಿವಿಧ ಪಕ್ಷಗಳ ಮುಖಂಡರು ಭಾಗವಹಿಸಲಿದ್ದಾರೆ ಎಂದು ಕಾಂಗ್ರೆಸ್‌ ಮುಖಂಡ ಬಿ.ಕೆ. ಹರಿಪ್ರಸಾದ್ ತಿಳಿಸಿದ್ದಾರೆ.

ಎಸ್‌ಐಆರ್‌ ಪ್ರಕ್ರಿಯೆಯಲ್ಲಿ ಅರ್ಹ ಮತದಾರರ ಹೆಸರುಗಳನ್ನು ಪಟ್ಟಿಯಿಂದ ಕೈಬಿಡಲಾಗುತ್ತಿದೆ ಎಂಬ ಆರೋಪ, ಚುನಾವಣಾ ಆಯೋಗದ ಕಾರ್ಯವೈಖರಿ ಹಾಗೂ ಮತದಾನದ ಹಕ್ಕಿಗೆ ಎದುರಾಗಿರುವ ಆತಂಕಗಳ ಕುರಿತು ಸಭೆಯಲ್ಲಿ ಚರ್ಚಿಸಲಾಗುವುದು ಎಂದು ಹೇಳಿದ್ದಾರೆ.

ಮತದಾನದ ಹಕ್ಕು ಪ್ರಜಾಪ್ರಭುತ್ವದ ಮೂಲಾಧಾರವಾಗಿದ್ದು, ಪ್ರತಿಯೊಬ್ಬ ಅರ್ಹ ನಾಗರಿಕನ ಮತಾಧಿಕಾರವನ್ನು ರಕ್ಷಿಸುವುದು ಚುನಾವಣಾ ಆಯೋಗದ ಹೊಣೆಗಾರಿಕೆಯಾಗಿದೆ. ಈ ನಿಟ್ಟಿನಲ್ಲಿ ರಾಜಕೀಯ ಹಾಗೂ ಕಾನೂನಾತ್ಮಕ ಹೋರಾಟವನ್ನು ಮತ್ತಷ್ಟು ಪರಿಣಾಮಕಾರಿಯಾಗಿ ಮುನ್ನಡೆಸಲು ಸಭೆಯಲ್ಲಿ ನಿರ್ಣಯ ಕೈಗೊಳ್ಳಲಾಗುವುದು ಎಂದು ತಿಳಿಸಿದ್ದಾರೆ.

ಸಾಂವಿಧಾನಿಕ ಸಂಸ್ಥೆಗಳ ಸ್ವಾಯತ್ತತೆ, ಚುನಾವಣಾ ಪ್ರಕ್ರಿಯೆಯ ಪಾರದರ್ಶಕತೆ ಹಾಗೂ ಪ್ರಜಾಪ್ರಭುತ್ವದ ವಿಶ್ವಾಸಾರ್ಹತೆ ಕಾಪಾಡಲು ಮೈತ್ರಿಕೂಟದ ಪಕ್ಷಗಳು ಒಗ್ಗಟ್ಟಿನಿಂದ ಹೋರಾಡಲಿವೆ. ರಾಜ್ಯದಿಂದ ತಳಮಟ್ಟದವರೆಗೆ ಪಕ್ಷಗಳ ನಡುವೆ ಸಮನ್ವಯ ಬಲಪಡಿಸಿ, ಜನಜಾಗೃತಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲು ಯೋಜನೆ ರೂಪಿಸಲಾಗುವುದು ಎಂದಿದ್ದಾರೆ.

ಮತದಾನದ ಹಕ್ಕಿನ ರಕ್ಷಣೆ ಯಾವುದೇ ಒಂದು ರಾಜಕೀಯ ಪಕ್ಷದ ಹಿತಾಸಕ್ತಿಗೆ ಸೀಮಿತವಲ್ಲ. ರಾಜಕೀಯ ಭಿನ್ನಾಭಿಪ್ರಾಯಗಳನ್ನು ಬದಿಗಿಟ್ಟು ಪ್ರಜಾಪ್ರಭುತ್ವ ಮತ್ತು ಸಂವಿಧಾನದ ರಕ್ಷಣೆಗೆ ಸಮಾನ ಮನಸ್ಕ ಶಕ್ತಿಗಳನ್ನು ಒಗ್ಗೂಡಿಸುವುದೇ ಸಭೆಯ ಉದ್ದೇಶ ಎಂದು ಹರಿಪ್ರಸಾದ ತಿಳಿಸಿದ್ದಾರೆ.

Author
Samadarshi News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST