ಪಾಟ್ನಾ, 25: ಪರೀಕ್ಷಾ ಅಕ್ರಮದ ಆರೋಪದ ಹಿನ್ನೆಲೆಯಲ್ಲಿ 70ನೇ ಬಿಹಾರ ಲೋಕಸೇವಾ ಆಯೋಗದ ಪರೀಕ್ಷೆಯನ್ನು ರದ್ದುಪಡಿಸುವುದು ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ನೂರಾರು ವಿದ್ಯಾರ್ಥಿಗಳು ಹಾಗೂ ಪರೀಕ್ಷಾರ್ಥಿಗಳು ಮಂಗಳವಾರ ಪಾಟ್ನಾದಲ್ಲಿ ಪ್ರತಿಭಟನೆ ನಡೆಸಿದರು. ಈ ವೇಳೆ ಪ್ರತಿಭಟನಾಕಾರರು ಪೊಲೀಸ್ ಬ್ಯಾರಿಕೇಡ್‌ಗಳನ್ನು ಭೇದಿಸಿ ಮುಖ್ಯಮಂತ್ರಿ ಸಾಮ್ರಾಟ್ ಚೌಧರಿ ಅವರ ನಿವಾಸದತ್ತ ಮೆರವಣಿಗೆ ನಡೆಸಿದ್ದು, ಪೊಲೀಸರು ಮತ್ತು ವಿದ್ಯಾರ್ಥಿಗಳ ನಡುವೆ ಘರ್ಷಣೆ ಸಂಭವಿಸಿದೆ.
ಬೆಳಗ್ಗೆ 10 ಗಂಟೆಗೆ ಗಾಂಧಿ ಮೈದಾನದಿಂದ ಮೆರವಣಿಗೆ ಆರಂಭಿಸಿದ ವಿದ್ಯಾರ್ಥಿಗಳು, ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಘೋಷಣೆಗಳನ್ನು ಕೂಗುತ್ತಾ ಮುಖ್ಯಮಂತ್ರಿ ನಿವಾಸದತ್ತ ಸಾಗಿದರು. ಪ್ರತಿಭಟನಾಕಾರರನ್ನು ತಡೆಯಲು ಪೊಲೀಸರು ಮಾರ್ಗಮಧ್ಯೆ ಬ್ಯಾರಿಕೇಡ್‌ಗಳನ್ನು ಅಳವಡಿಸಿದ್ದರು.
ಆದರೆ ಬ್ಯಾರಿಕೇಡ್‌ಗಳನ್ನು ಭೇದಿಸಿ ಮುಂದೆ ಸಾಗಲು ಪ್ರತಿಭಟನಾಕಾರರು ಯತ್ನಿಸಿದಾಗ ಪೊಲೀಸರು ಮತ್ತು ವಿದ್ಯಾರ್ಥಿಗಳ ನಡುವೆ ಘರ್ಷಣೆ ನಡೆಯಿತು. ಪರಿಸ್ಥಿತಿ ನಿಯಂತ್ರಿಸಲು ಪೊಲೀಸರು ಲಾಠಿ ಪ್ರಹಾರ ನಡೆಸಿ ಜಲಫಿರಂಗಿ ಪ್ರಯೋಗಿಸಿದರು.
ಪೊಲೀಸರ ಕ್ರಮದ ನಡುವೆಯೂ ವಿದ್ಯಾರ್ಥಿಗಳು ತಮ್ಮ ಮೆರವಣಿಗೆಯನ್ನು ಮುಂದುವರಿಸಲು ಪ್ರಯತ್ನಿಸಿದರು. ಮುಖ್ಯಮಂತ್ರಿ ನಿವಾಸದತ್ತ ತೆರಳುತ್ತಿದ್ದ ಹಲವು ಪ್ರತಿಭಟನಾಕಾರರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಪರೀಕ್ಷೆಯಲ್ಲಿ ಅಕ್ರಮ ನಡೆದಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ 70ನೇ ಬಿಹಾರ ಲೋಕಸೇವಾ ಆಯೋಗದ ಪರೀಕ್ಷೆಯನ್ನು ರದ್ದುಪಡಿಸಬೇಕು, ಪರೀಕ್ಷಾ ಪ್ರಕ್ರಿಯೆಯಲ್ಲಿ ಪಾರದರ್ಶಕತೆ ಕಾಪಾಡಬೇಕು ಸೇರಿದಂತೆ ಹಲವು ಬೇಡಿಕೆಗಳನ್ನು ವಿದ್ಯಾರ್ಥಿಗಳು ಮುಂದಿಟ್ಟಿದ್ದಾರೆ.