ಹೊಸದಿಲ್ಲಿ, ಮೇ 19 : ಆಕ್ರಮಣಕಾರಿ ಹಾಗೂ ಅಪಾಯಕಾರಿ ಬೀದಿ ನಾಯಿಗಳ ದಯಾಮರಣ ನಡೆಸಲು ಅಧಿಕಾರಿಗಳಿಗೆ ಸುಪ್ರೀಂ ಕೋರ್ಟ್ ಅನುಮತಿ ನೀಡಿದೆ. ಜೊತೆಗೆ ಸಾರ್ವಜನಿಕ ಸ್ಥಳಗಳಲ್ಲಿರುವ ಬೀದಿ ನಾಯಿಗಳನ್ನು ಸ್ಥಳಾಂತರಿಸುವ ಕುರಿತು ಈ ಹಿಂದೆ ನೀಡಿದ್ದ ಆದೇಶವನ್ನು ಹಿಂಪಡೆಯುವಂತೆ ಸಲ್ಲಿಸಲಾಗಿದ್ದ ಅರ್ಜಿಗಳನ್ನು ವಜಾಗೊಳಿಸಿದೆ.
ಮಾನವ ಜೀವಕ್ಕೆ ಅಪಾಯ ಉಂಟುಮಾಡುವ ಕ್ರೋಧೋನ್ಮತ್ತ ಹಾಗೂ ಅಪಾಯಕಾರಿ ನಾಯಿಗಳ ವಿರುದ್ಧ ಕಾನೂನುಬದ್ಧ ಕ್ರಮ ಕೈಗೊಳ್ಳಲು ಅಧಿಕಾರಿಗಳಿಗೆ ಅವಕಾಶವಿದೆ ಎಂದು ಸುಪ್ರೀಂ ಕೋರ್ಟ್ ಸ್ಪಷ್ಟಪಡಿಸಿದೆ.
ನಾಯಿಗಳ ಭೀತಿಯಿಲ್ಲದೆ ಸುರಕ್ಷಿತವಾಗಿ ಬದುಕುವ ಹಕ್ಕು ಕೂಡ ಮಾನವ ಘನತೆಯ ಬದುಕಿನ ಭಾಗವಾಗಿದೆ ಎಂದು ನ್ಯಾಯಾಲಯ ಅಭಿಪ್ರಾಯಪಟ್ಟಿದೆ. ಬೀದಿ ನಾಯಿಗಳ ಸ್ಥಳಾಂತರ ಹಾಗೂ ಸಂತಾನಹರಣ ಚಿಕಿತ್ಸೆಗೆ ಸಂಬಂಧಿಸಿದಂತೆ 2025ರ ನವೆಂಬರ್‌ನಲ್ಲಿ ನೀಡಿದ್ದ ಆದೇಶವನ್ನು ಮಾರ್ಪಡಿಸುವಂತೆ ಸಲ್ಲಿಸಿದ್ದ ಎಲ್ಲ ಅರ್ಜಿಗಳನ್ನೂ ನ್ಯಾಯಾಲಯ ವಜಾಗೊಳಿಸಿತು.
ನ್ಯಾಯಮೂರ್ತಿಗಳಾದ ವಿಕ್ರಮ್ ನಾಥ್, ಸಂದೀಪ್ ಮೆಹ್ತಾ ಹಾಗೂ ಎನ್.ವಿ. ಅಂಜಾರಿಯಾ ಅವರನ್ನೊಳಗೊಂಡ ತ್ರಿಸದಸ್ಯ ಪೀಠವು, ಹೆಚ್ಚುತ್ತಿರುವ ಬೀದಿ ನಾಯಿಗಳ ಸಮಸ್ಯೆಯನ್ನು ನಿಯಂತ್ರಿಸಲು ರಾಜ್ಯಗಳು ಹಾಗೂ ಕೇಂದ್ರಾಡಳಿತ ಪ್ರದೇಶಗಳು ಸಮರ್ಪಕ ಮೂಲಸೌಕರ್ಯ ನಿರ್ಮಾಣದಲ್ಲಿ ವಿಫಲವಾಗಿವೆ ಎಂದು ತೀವ್ರ ಅಸಮಾಧಾನ ವ್ಯಕ್ತಪಡಿಸಿತು.
ಮಕ್ಕಳು, ವೃದ್ಧರು ಹಾಗೂ ಸಾರ್ವಜನಿಕರು ನಿರಂತರವಾಗಿ ನಾಯಿ ಕಡಿತಕ್ಕೆ ಒಳಗಾಗುತ್ತಿರುವ ಕಠೋರ ವಾಸ್ತವವನ್ನು ನಿರ್ಲಕ್ಷಿಸಲು ಸಾಧ್ಯವಿಲ್ಲ ಎಂದು ಪೀಠ ಹೇಳಿತು.
ಪ್ರಾಣಿ ಕಲ್ಯಾಣ ಮಂಡಳಿಯ ಎಸ್‌ಒಪಿ ಪ್ರಶ್ನಿಸಿ ಸಲ್ಲಿಸಲಾಗಿದ್ದ ಅರ್ಜಿಗಳನ್ನೂ ನ್ಯಾಯಾಲಯ ವಜಾಗೊಳಿಸಿ, ಬೀದಿ ನಾಯಿಗಳ ಕುರಿತು ಈ ಹಿಂದೆ ನೀಡಿದ್ದ ಆದೇಶ ಮುಂದುವರಿಯಲಿದೆ ಎಂದು ಸ್ಪಷ್ಟಪಡಿಸಿತು.
ನಾಯಿ ಕಡಿತ ಪ್ರಕರಣಗಳು ಆತಂಕಕಾರಿ ಪ್ರಮಾಣದಲ್ಲಿ ಹೆಚ್ಚುತ್ತಿವೆ. ಈ ಸಮಸ್ಯೆ ವಸತಿ ಪ್ರದೇಶಗಳಷ್ಟೇ ಅಲ್ಲದೆ ವಿಮಾನ ನಿಲ್ದಾಣಗಳು ಹಾಗೂ ಇತರ ಸಾರ್ವಜನಿಕ ಸ್ಥಳಗಳಿಗೂ ವ್ಯಾಪಿಸಿದೆ ಎಂದು ನ್ಯಾಯಾಲಯ ಕಳವಳ ವ್ಯಕ್ತಪಡಿಸಿತು.
ಗುಜರಾತ್‌ನ ಸೂರತ್‌ನಲ್ಲಿ ಜರ್ಮನ್ ಪ್ರವಾಸಿಗನೊಬ್ಬ ನಾಯಿ ಕಡಿತಕ್ಕೆ ಒಳಗಾದ ಘಟನೆ ಸೇರಿದಂತೆ ಹಲವು ಉದಾಹರಣೆಗಳನ್ನು ಉಲ್ಲೇಖಿಸಿದ ಪೀಠ, ಇಂತಹ ಘಟನೆಗಳು ನಗರಾಡಳಿತದ ಮೇಲಿನ ಸಾರ್ವಜನಿಕರ ವಿಶ್ವಾಸಕ್ಕೆ ಧಕ್ಕೆಯುಂಟು ಮಾಡುತ್ತವೆ ಎಂದು ತಿಳಿಸಿತು.
ರಾಜ್ಯಗಳು ಪ್ರಾಣಿ ಜನನ ನಿಯಂತ್ರಣ ನಿಯಮಗಳನ್ನು ಸಮರ್ಪಕವಾಗಿ ಜಾರಿಗೆ ತಂದಿದ್ದರೆ ಇಂತಹ ಪರಿಸ್ಥಿತಿ ಎದುರಾಗುತ್ತಿರಲಿಲ್ಲ ಎಂದು ಸುಪ್ರೀಂ ಕೋರ್ಟ್ ಅಭಿಪ್ರಾಯಪಟ್ಟಿತು.
ಬೀದಿ ನಾಯಿಗಳ ನಿಯಂತ್ರಣಕ್ಕಾಗಿ ಅಗತ್ಯ ಮೂಲಸೌಕರ್ಯ ಹೆಚ್ಚಿಸಲು ರಾಜ್ಯಗಳು ಹಾಗೂ ಕೇಂದ್ರಾಡಳಿತ ಪ್ರದೇಶಗಳು ಸಮನ್ವಯದ ಪ್ರಯತ್ನ ನಡೆಸಬೇಕು ಎಂದು ಸೂಚನೆ ನೀಡಿತು.
ರಾಜಸ್ಥಾನದ ಶ್ರೀಗಂಗಾನಗರದಲ್ಲಿ ಕೇವಲ ಒಂದು ತಿಂಗಳಲ್ಲಿ 1,084 ಜನರಿಗೆ ನಾಯಿ ಕಡಿತವಾಗಿರುವುದು ಹಾಗೂ ತಮಿಳುನಾಡಿನಲ್ಲಿ ಕಳೆದ ನಾಲ್ಕು ತಿಂಗಳಲ್ಲಿ ಸುಮಾರು 2 ಲಕ್ಷ ನಾಯಿ ಕಡಿತ ಪ್ರಕರಣಗಳು ದಾಖಲಾಗಿರುವುದನ್ನು ನ್ಯಾಯಾಲಯ ಉಲ್ಲೇಖಿಸಿತು.
ಸಾರ್ವಜನಿಕ ಸ್ಥಳಗಳು, ಶಾಲೆಗಳು, ಆಸ್ಪತ್ರೆಗಳು, ಬಸ್ ನಿಲ್ದಾಣಗಳು ಹಾಗೂ ರೈಲು ನಿಲ್ದಾಣಗಳ ಸುತ್ತಮುತ್ತಲಿನ ಬೀದಿ ನಾಯಿಗಳನ್ನು ಹಿಡಿದು ಸುರಕ್ಷಿತ ಆಶ್ರಯ ಕೇಂದ್ರಗಳಿಗೆ ಸ್ಥಳಾಂತರಿಸಬೇಕು ಎಂದು ನ್ಯಾಯಾಲಯ ಕಟ್ಟುನಿಟ್ಟಿನ ನಿರ್ದೇಶನ ನೀಡಿದೆ.
ಆಕ್ರಮಣಕಾರಿ ನಾಯಿಗಳನ್ನು ಆದ್ಯತೆಯ ಮೇರೆಗೆ ತೆರವುಗೊಳಿಸುವ ಜೊತೆಗೆ ಬೀದಿ ನಾಯಿಗಳ ನಿಯಂತ್ರಣಕ್ಕಾಗಿ ರಾಷ್ಟ್ರೀಯ ನೀತಿ ರೂಪಿಸುವಂತೆ ಕೇಂದ್ರ ಮತ್ತು ರಾಜ್ಯ ಸರ್ಕಾರಗಳಿಗೆ ಸೂಚಿಸಲಾಗಿದೆ.