ಶ್ರೀಕಾಕುಳಂ, ಸೆ. 23 : (ಸಮದರ್ಶಿ ಸುದ್ದಿ) - ರೈಲು ಹಳಿ ಸಮೀಪ ನಡೆದುಕೊಂಡು ಹೋಗುತ್ತಿದ್ದ ವಿದ್ಯಾರ್ಥಿಗಳ ಗುಂಪಿಗೆ ಎಕ್ಸ್‌ಪ್ರೆಸ್ ರೈಲು ಢಿಕ್ಕಿ ಹೊಡೆದ ಪರಿಣಾಮ ನಾಲ್ವರು ವಿದ್ಯಾರ್ಥಿಗಳು ಮೃತಪಟ್ಟಿದ್ದು, ಮತ್ತೊಬ್ಬ ವಿದ್ಯಾರ್ಥಿ ಗಂಭೀರವಾಗಿ ಗಾಯಗೊಂಡ ಘಟನೆ ಆಂಧ್ರ ಪ್ರದೇಶದ ಶ್ರೀಕಾಕುಳಂ ಜಿಲ್ಲೆಯ ತೆಕ್ಕಲಿ ಮಂಡಲದ ರವಿವಲಸಾ ಬಳಿ ಬುಧವಾರ ಸಂಭವಿಸಿದೆ.
ರಾಜ್ಯ ರಾಣಿ ಎಕ್ಸ್‌ಪ್ರೆಸ್ ರೈಲು ವಿದ್ಯಾರ್ಥಿಗಳಿಗೆ ಢಿಕ್ಕಿ ಹೊಡೆದಿದ್ದು, ಮೃತಪಟ್ಟವರನ್ನು ವಿಶಾಖರಾವ್, ದಿಲೀಪ್ ಕುಮಾರ್, ಶಿವ ಮತ್ತು ಶರತ್ ಕುಮಾರ್ ಎಂದು ಗುರುತಿಸಲಾಗಿದೆ. ಗಾಯಗೊಂಡ ಸಾಲ್ಮನ್ ರಾಜ್ ಅವರನ್ನು ತೆಕ್ಕಲಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ಪ್ರಾಥಮಿಕ ಮಾಹಿತಿಯ ಪ್ರಕಾರ, ವಿದ್ಯಾರ್ಥಿಗಳು ಮೂತ್ರ ವಿಸರ್ಜನೆಗಾಗಿ ರೈಲು ಹಳಿ ಸಮೀಪ ತೆರಳಿದ್ದ ವೇಳೆ ದುರಂತ ಸಂಭವಿಸಿದೆ. ರೈಲು ಬರುತ್ತಿರುವುದನ್ನು ಗಮನಿಸದಿರುವುದು ಅಪಘಾತಕ್ಕೆ ಕಾರಣವಾಗಿರಬಹುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಘಟನೆಗೆ ಸಂಬಂಧಿಸಿದ ನಿಖರ ಕಾರಣ ಕುರಿತು ತನಿಖೆ ನಡೆಯುತ್ತಿದೆ.
ಕೇಂದ್ರ ನಾಗರಿಕ ವಿಮಾನಯಾನ ಸಚಿವ ಕೆ. ರಾಮ್ ಮೋಹನ್ ನಾಯ್ಡು ಘಟನೆಗೆ ಸಂತಾಪ ವ್ಯಕ್ತಪಡಿಸಿದ್ದು, ರೈಲ್ವೆ ಮತ್ತು ಕಂದಾಯ ಇಲಾಖೆ ಅಧಿಕಾರಿಗಳಿಂದ ಮಾಹಿತಿ ಪಡೆದಿದ್ದಾರೆ. ಗಾಯಾಳು ವಿದ್ಯಾರ್ಥಿಗೆ ಉತ್ತಮ ಚಿಕಿತ್ಸೆ ಒದಗಿಸುವಂತೆ ಸೂಚಿಸಿದ್ದಾರೆ.
ಆಂಧ್ರ ಪ್ರದೇಶ ಮುಖ್ಯಮಂತ್ರಿ ಎನ್. ಚಂದ್ರಬಾಬು ನಾಯ್ಡು ಕೂಡ ವಿದ್ಯಾರ್ಥಿಗಳ ಸಾವಿಗೆ ಸಂತಾಪ ಸೂಚಿಸಿದ್ದಾರೆ. ಗಾಯಾಳುವಿಗೆ ಸೂಕ್ತ ವೈದ್ಯಕೀಯ ಚಿಕಿತ್ಸೆ ನೀಡುವುದರ ಜೊತೆಗೆ ಮೃತ ವಿದ್ಯಾರ್ಥಿಗಳ ಕುಟುಂಬಗಳಿಗೆ ಅಗತ್ಯ ನೆರವು ಒದಗಿಸುವಂತೆ ಅಧಿಕಾರಿಗಳಿಗೆ ನಿರ್ದೇಶನ ನೀಡಿದ್ದಾರೆ.