ಧಾರವಾಡ, ಅ.23 (ಸಮದರ್ಶಿ ಸುದ್ದಿ): ಕರ್ನಾಟಕ ವಿಧಾನ ಪರಿಷತ್ತಿನ ಪಶ್ಚಿಮ ಪದವೀಧರರ ಕ್ಷೇತ್ರಕ್ಕೆ ಶುಕ್ರವಾರ ಮತದಾನ ನಡೆದಿದ್ದು, ಬಿಜೆಪಿ ಅಭ್ಯರ್ಥಿ ಎಸ್.ವಿ. ಸಂಕನೂರ ಹಾಗೂ ಕಾಂಗ್ರೆಸ್ ಅಭ್ಯರ್ಥಿ ಮೋಹನ ಲಿಂಬಿಕಾಯಿ ನಡುವಿನ ಸ್ಪರ್ಧೆ ಗಮನ ಸೆಳೆದಿದೆ. ಅಕ್ಟೋಬರ್ 27ರಂದು ಮತ ಎಣಿಕೆ ನಡೆಯಲಿದೆ.
ಧಾರವಾಡ, ಗದಗ, ಹಾವೇರಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳನ್ನು ಒಳಗೊಂಡಿರುವ ಕ್ಷೇತ್ರದಲ್ಲಿ ಬೆಳಗ್ಗೆ 8 ಗಂಟೆಗೆ ಮತದಾನ ಆರಂಭವಾಗಿ ಸಂಜೆ 4 ಗಂಟೆಗೆ ಮುಕ್ತಾಯಗೊಂಡಿದೆ. ಒಟ್ಟು 14 ಅಭ್ಯರ್ಥಿಗಳು ಕಣದಲ್ಲಿದ್ದು, 97,398 ಮತದಾರರು ಮತದಾನದ ಹಕ್ಕು ಹೊಂದಿದ್ದಾರೆ. ಕ್ಷೇತ್ರದಾದ್ಯಂತ 137 ಮತಗಟ್ಟೆಗಳನ್ನು ಸ್ಥಾಪಿಸಲಾಗಿತ್ತು.
ಹಾಲಿ ವಿಧಾನ ಪರಿಷತ್ ಸದಸ್ಯ ಎಸ್.ವಿ. ಸಂಕನೂರ ಮೂರನೇ ಅವಧಿಗೆ ಆಯ್ಕೆ ಬಯಸಿದ್ದಾರೆ. ಮಾಜಿ ವಿಧಾನ ಪರಿಷತ್ ಸದಸ್ಯ ಮೋಹನ ಲಿಂಬಿಕಾಯಿ ಕಾಂಗ್ರೆಸ್ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದಾರೆ. ಇಬ್ಬರ ನಡುವಿನ ಪೈಪೋಟಿಯಿಂದಾಗಿ ಈ ಚುನಾವಣೆ ರಾಜಕೀಯ ಮಹತ್ವ ಪಡೆದುಕೊಂಡಿದೆ.
ಗದಗ ಜಿಲ್ಲೆಯಲ್ಲಿ ಮತದಾನಕ್ಕೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದ್ದು, ಶೇ 46.18ರಷ್ಟು ಮತದಾನ ದಾಖಲಾಗಿದೆ ಎಂದು ಸ್ಥಳೀಯ ವರದಿ ತಿಳಿಸಿದೆ. ಗದಗದ ಮತಗಟ್ಟೆಯೊಂದರಲ್ಲಿ ಸಂಕನೂರ ತಮ್ಮ ಮತ ಚಲಾಯಿಸಿದರು. ಮತಗಟ್ಟೆಗಳ ಸುತ್ತ ಪೊಲೀಸ್ ಬಂದೋಬಸ್ತ್ ಕಲ್ಪಿಸಲಾಗಿತ್ತು.
ಹಾವೇರಿ ಜಿಲ್ಲೆಯ 29 ಮತಗಟ್ಟೆಗಳಲ್ಲಿ ಮತದಾನಕ್ಕೆ ವ್ಯವಸ್ಥೆ ಮಾಡಲಾಗಿತ್ತು. ಮತದಾನ ಪ್ರಕ್ರಿಯೆಯ ಮೇಲ್ವಿಚಾರಣೆಗಾಗಿ ನೇರ ದೃಶ್ಯಾವಳಿ ಪ್ರಸಾರ ವ್ಯವಸ್ಥೆ ಅಳವಡಿಸಲಾಗಿತ್ತು. ಮತಪೆಟ್ಟಿಗೆಗಳನ್ನು ಪೊಲೀಸ್ ಭದ್ರತೆಯಲ್ಲಿ ಧಾರವಾಡದ ಕೃಷಿ ವಿಶ್ವವಿದ್ಯಾಲಯದ ಭದ್ರತಾ ಕೊಠಡಿಗೆ ಸಾಗಿಸಲು ವ್ಯವಸ್ಥೆ ಮಾಡಲಾಗಿದೆ.
ಇದೇ ದಿನ ರಾಜ್ಯದ ಆಗ್ನೇಯ ಪದವೀಧರರ, ಈಶಾನ್ಯ ಶಿಕ್ಷಕರ ಹಾಗೂ ಬೆಂಗಳೂರು ಶಿಕ್ಷಕರ ಕ್ಷೇತ್ರಗಳಿಗೂ ಮತದಾನ ನಡೆದಿದೆ. ನಾಲ್ಕೂ ಕ್ಷೇತ್ರಗಳ ಮತ ಎಣಿಕೆ ಅಕ್ಟೋಬರ್ 27ರಂದು ನಡೆಯಲಿದೆ.