This is the title of the web page

ಪದ್ಮಶ್ರೀ ಇಬ್ರಾಹಿಮ್ ಸುತಾರ ಇನ್ನಿಲ್ಲ

ಬಾಗಲಕೋಟ, 5- ಖ್ಯಾತ ಪ್ರವಚನಕಾರರು, ಪದ್ಮಶ್ರೀ ಪುರಸ್ಕೃತ ಇಬ್ರಾಹಿಮ್ ಸುತಾರ ಅವರು ಶನಿವಾರ ಮುಂಜಾನೆ  ಹೃದಯಾಘಾತದಿಂದ ನಿಧನರಾಗಿದ್ದಾರೆ.

ವೈದಿಕ, ವಚನ ಹಾಗೂ ಸೂಫಿ ಪರಂಪರೆಯನ್ನು ಭಜನೆ, ಪ್ರವಚನ, ಸಂವಾದಗಳ ಮೂಲಕ ಉಣಬಡಿಸಿ ಹಿಂದೂ–ಮುಸ್ಲಿಮರ ನಡುವೆ ಭಾವೈಕ್ಯತೆ ಪಸರಿಸಿದ್ದ ಇಬ್ರಾಹಿಂ ಸುತಾರ ಅವರು ಪತ್ನಿ, ಪುತ್ರ ಹಾಗೂ ಇಬ್ಬರು ಪುತ್ರಿಯರನ್ನು ಬಿಟ್ಟು ಅಗಲಿದ್ದಾರೆ.

ಬಾಗಲಕೋಟ ಜಿಲ್ಲೆಯ ಮಹಾಲಿಂಗಪುರದ ಬಡ ಕುಟುಂಬದಲ್ಲಿ ಇಬ್ರಾಹಿಂ ಸುತಾರ 1940ರ ಮೇ 10ರಂದು ಜನಿಸಿದರು. ಇವರ ತಂದೆ ನಬಿಸಾಹೇಬ ಮತ್ತು ತಾಯಿ ಅಮೀನಾಬಿ. ಇವರ ತಂದೆ ಬಡಗಿ ವೃತ್ತಿಯನ್ನು ಮಾಡಿಕೊಂಡಿದ್ದು, ಬಡ ಕುಟುಂಬದಲ್ಲಿ ಜನಿಸಿದ ಇಬ್ರಾಹಿಂ ಸುತಾರ ಅವರಿಗೆ ಓದಲು ಸಾಧ್ಯವಾಗಲಿಲ್ಲ.

ಸುತಾರ ಅವರ ನಿಧನಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸೇರಿದಂತೆ ಹಲವು ಗಣ್ಯರು ಸಂತಾಪ ಸೂಚಿಸಿದ್ದಾರೆ. ಸರ್ವಧರ್ಮ ಸಮನ್ವಯದ ಪ್ರವಚನಕಾರರು, ಪದ್ಮಶ್ರೀ ಪ್ರಶಸ್ತಿ ಪುರಸ್ಕೃತ ಇಬ್ರಾಹಿಮ್ ಸುತಾರ ಅವರು ಇಂದು ಮುಂಜಾನೆ ನಿಧನರಾದ ಸುದ್ದಿ ತಿಳಿದು ದುಃಖಿತನಾಗಿದ್ದೇನೆ‌. ಸಮಾಜದಲ್ಲಿ ಸಾಮರಸ್ಯದ ಬೀಜ ಬಿತ್ತಲು ಶ್ರಮಿಸಿದ ಅವರ ದಿವ್ಯಾತ್ಮಕ್ಕೆ ದೇವರು ಶಾಂತಿ ನೀಡಲಿ ಹಾಗೂ ಈ ನೋವನ್ನು ಭರಿಸುವ ಶಕ್ತಿ ಅವರ ಕುಟುಂಬದವರಿಗೆ ಹಾಗೂ ಅಭಿಮಾನಿಗಳಿಗೆ ಕರುಣಿಸಲಿ ಎಂದು ಪ್ರಾರ್ಥಿಸುತ್ತೇನೆ” ಎಂದು ಬೊಮ್ಮಾಯಿ ಕಂಬನಿ ಮಿಡಿದಿದ್ದಾರೆ.

You might also like
Leave a comment