ಕಾರವಾರ : ತೀವ್ರ ವಿವಾದಕ್ಕೆ ಕಾರಣವಾಗಿದ್ದ ಹೊನ್ನಾವರದ ಪರೇಶ ಮೇಸ್ತಾನದ್ದು ಕೊಲೆಯಲ್ಲ, ಆಕಸ್ಮಿಕ ಸಾವು ಎಂದು ಹೊನ್ನಾವರದ ನ್ಯಾಯಾಲಯಕ್ಕೆ ಸಿಬಿಐ ವರದಿ ಸಲ್ಲಿಸಿದೆ.
ಪರೇಶ ಮೇಸ್ತಾ ಸಾವಿನಲ್ಲಿ ಯಾವುದೇ ಸಾಕ್ಷ್ಯಾಧಾರಗಳು ಸಿಕ್ಕಿಲ್ಲ. ಮರಣೋತ್ತರ ಪರೀಕ್ಷೆ ಸೇರಿ ವಿವಿಧ ವರದಿಗಳು ಮೇಸ್ತಾ ನೀರಿನಲ್ಲಿ ಮುಳುಗಿ ಮೃತಪಟ್ಟಿದ್ದಾನೆಂದು ಹೇಳುತ್ತಿವೆ ಎಂದು ಕೋರ್ಟಗೆ ಸಿಬಿಐ ಸಲ್ಲಿಸಿದ ವರದಿಯಲ್ಲಿ ಉಲ್ಲೇಖವಾಗಿದೆ. ಈ ವರದಿ ಪರಿಶೀಲಿಸಿದ ಕೋರ್ಟ ತೀರ್ಪನ್ನು ನವೆಂಬರ್ 16 ಕ್ಕೆ ಮುಂದೂಡಿದೆ.
2017ರ ಡಿಸೆಂಬರ್ 6ರಂದು ಹೊನ್ನಾವರದಲ್ಲಿ ಗಲಭೆ ನಡೆದು, ಬಳಿಕ ಅದು ಕೋಮು ಸಂಘರ್ಷದ ರೂಪ ಪಡೆದಿತ್ತು. ಆಗ ನಡೆದ ಗಲಭೆಯಲ್ಲಿ ಮೀನುಗಾರ ಯುವಕ ಪರೇಶ ಮೇಸ್ತಾ ಕಾಣೆಯಾಗಿದ್ದ. ಬಳಿಕ ಡಿಸೆಂಬರ್ 8ರಂದು ಹೊನ್ನಾವರ ನಗರದ ಬಸ್ ನಿಲ್ದಾಣದ ಮುಂದಿನ ಶನಿ ದೇವಸ್ಥಾನದ ಹಿಂಭಾಗದ ಶೆಟ್ಟಿ ಕೆರೆಯಲ್ಲಿ ಶವವಾಗಿ ಪತ್ತೆಯಾಗಿದ್ದ.
ಪರೇಶ ಮೇಸ್ತನದ್ದು ಕೊಲೆ ಅಂತ ಕುಟುಂಬಸ್ಥರು, ಹಾಗೂ ಬಿಜೆಪಿ, ಹಿಂದೂ ಸಂಘಟನೆಗಳು ಆರೋಪಿಸಿದ್ದವು. ಪರೇಶ ಮೇಸ್ತನನ್ನು ಅನ್ಯ ಕೋಮಿನ ದುಷ್ಕರ್ಮಿಗಳು ಹತ್ಯೆ ಮಾಡಿದ್ದಾರೆಂದು ಹಿಂದೂ ಸಂಘಟನೆಗಳು ಹಾಗೂ ಬಿಜೆಪಿ ಕಾರ್ಯಕರ್ತರು ಆರೋಪಿಸಿದ್ದರು. ಮೇಸ್ತಾನನ್ನು ಬಿಜೆಪಿ ಹಾಗೂ ಹಿಂದೂ ಸಂಘಟನೆಗಳು, ಹಿಂದೂ ಕಾರ್ಯಕರ್ತ ಎಂದು ಬಿಂಬಿಸಿದ್ದರಿಂದ ಈ ಘಟನೆ ಕರಾವಳಿಯಲ್ಲಿ ಕೋಮು ಸಂಘರ್ಷಕ್ಕೆ ಕಾರಣವಾಗಿತ್ತು.
ಪರೇಶ ಮೇಸ್ತನನ್ನು ಹತ್ಯೆ ಮಾಡಲಾಗಿದೆ ಎಂಬ ಆರೋಪ ಬಲವಾಗಿ ಕೇಳಿಬಂತು. ಉತ್ತರ ಕನ್ನಡ ಜಿಲ್ಲೆಯ ಕಾರವಾರ, ಹೊನ್ನಾವರ, ಕುಮಟಾ, ಮುಂಡಗೋಡದಲ್ಲಿ ಹಿಂದೂ ಸಂಘಟನೆಗಳು ಡಿಸೆಂಬರ್ 11ರಂದು ಬಂದ್ಗೆ ಕರೆ ನೀಡಿದ್ದವು. ಕುಮಟಾದಲ್ಲಿ ಹಿಂದೂ ಸಂಘಟನೆಗಳ ಪ್ರತಿಭಟನೆ ಹಿಂಸಾರೂಪಕ್ಕೆ ತಿರುಗಿತ್ತು. ಐಜಿಪಿ ಅವರ ಕಾರಿಗೂ ಸಹ ಬೆಂಕಿ ಹಚ್ಚಲಾಯಿತು. ಪೊಲೀಸರ ಮೇಲೆ ಕಲ್ಲು ತೂರಲಾಯಿತು. ಘಟನೆಯಲ್ಲಿ ಹಲವಾರು ಪೊಲೀಸರು ಗಾಯಗೊಂಡಿದ್ದರು ಮತ್ತು ವಾಹನಗಳು ಜಖಂಗೊಂಡಿದ್ದವು.
ಪರೇಶ ಮೇಸ್ತ ಸಾವು ಪ್ರಕರಣ ರಾಜ್ಯಾದ್ಯಂತ ತೀವ್ರ ಆಕ್ರೋಶ ಹಾಗೂ ಚರ್ಚೆಗೆ ಕಾರಣವಾಗಿತ್ತು. ಈ ಪ್ರಕರಣದ ತನಿಖೆಯನ್ನು ಎನ್ಐಎಗೆ ವಹಿಸಬೇಕೆಂದು ಅಂದು ಬಿಜೆಪಿ ಹಾಗೂ ಹಿಂದೂ ಸಂಘಟನೆಗಳು ಒತ್ತಾಯಿಸಿದ್ದವು. ತೀವ್ರ ಒತ್ತಡಕ್ಕೆ ತಲೆಬಾಗಿದ ಅಂದಿನ ಮುಖ್ಯಮಂತ್ರಿ ಸಿದ್ದರಾಮಯ್ಯನವರ ನೇತೃತ್ವದ ಕಾಂಗ್ರೆಸ್ ಸರ್ಕಾರವು ಪ್ರಕರಣವನ್ನು ಸಿಬಿಐಗೆ ವಹಿಸಿತ್ತು.
ಈ ಪ್ರಕರಣದ ಸಂಬಂಧ ಐದು ಜನರನ್ನೂ ಸಹ ಬಂಧಿಸಲಾಗಿತ್ತು. ಇದೀಗ ವಿಸ್ತೃತ ತನಿಖೆ ನಡೆಸಿ ನಾಲ್ಕೂವರೆ ವರ್ಷದ ನಂತರ ಸಿಬಿಐ ಹೊನ್ನಾವರ ನ್ಯಾಯಾಲಯಕ್ಕೆ ವರದಿ ಸಲ್ಲಿಸಿದೆ.