ಹೊಸದಿಲ್ಲಿ: ಉತ್ತರ ಪ್ರದೇಶದ ಲಖಿಂಪುರ ಖೇರಿಯಲ್ಲಿ ಇಬ್ಬರು ಅಪ್ರಾಪ್ತ ಸಹೋದರಿಯರ ಶವಗಳು ಮರಕ್ಕೆ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾದ ಬಗ್ಗೆ ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ ಬಿಜೆಪಿ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಮಹಿಳೆಯರು ಮತ್ತು ಬಾಲಕಿಯರ ಮೇಲಿನ ಘೋರ ಅಪರಾಧಗಳು ಏಕೆ ಹೆಚ್ಚುತ್ತಿವೆ ಎಂದು ಅವರು ಕೇಳಿದ್ದಾರೆ.
ಇಬ್ಬರು ಬಾಲಕಿಯರು ಬುಧವಾರ ಉತ್ತರ ಪ್ರದೇಶದ ಲಖಿಂಪುರ ಖೇರಿ ಜಿಲ್ಲೆಯ ಗ್ರಾಮವೊಂದರಲ್ಲಿ ಮರಕ್ಕೆ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ. ಲಖಿಂಪುರ ಖೇರಿಯಲ್ಲಿ ಇಬ್ಬರು ಸಹೋದರಿಯರ ಹತ್ಯೆ ಹೃದಯ ವಿದ್ರಾವಕವಾಗಿದೆ. ಹಗಲು ಹೊತ್ತಿನಲ್ಲಿ ಹುಡುಗಿಯರನ್ನು ಅಪಹರಿಸಲಾಗಿದೆ ಎಂದು ಸಂಬಂಧಿಕರು ಹೇಳುತ್ತಾರೆ ಎಂದು ಪ್ರಿಯಾಂಕಾ ಗಾಂಧಿ ಹಿಂದಿಯಲ್ಲಿ ಟ್ವೀಟ್ ಮಾಡಿದ್ದಾರೆ.
ಪ್ರತಿದಿನ ಪತ್ರಿಕೆಗಳು ಮತ್ತು ವಾಹಿನಿಗಳಲ್ಲಿ ಸುಳ್ಳು ಜಾಹೀರಾತುಗಳನ್ನು ನೀಡುವುದರಿಂದ ಕಾನೂನು ಮತ್ತು ಸುವ್ಯವಸ್ಥೆ ಸುಧಾರಿಸುವುದಿಲ್ಲ. ಅಷ್ಟಕ್ಕೂ ಉತ್ತರ ಪ್ರದೇಶದಲ್ಲಿ ಮಹಿಳೆಯರ ಮೇಲಿನ ಘೋರ ಅಪರಾಧಗಳು ಏಕೆ ಹೆಚ್ಚುತ್ತಿವೆ ಎಂದು ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ಪ್ರಶ್ನಿಸಿದ್ದಾರೆ.
ಸರ್ಕಾರ ಯಾವಾಗ ಎಚ್ಚೆತ್ತುಕೊಳ್ಳುತ್ತದೆ ಎಂದು ಕೇಳಿರುವ ಅವರು, ಮಾಧ್ಯಮ ವರದಿಯನ್ನು ಹಂಚಿಕೊಂಡಿದ್ದಾರೆ, ಅಪ್ರಾಪ್ತ ಬಾಲಕಿಯರ ಶವಗಳನ್ನು ಮೂವರು ಪುರುಷರು ಅಪಹರಿಸಿ ಅತ್ಯಾಚಾರವೆಸಗಿ ಕೊಂದು ಮರಕ್ಕೆ ನೇಣು ಹಾಕಿದ್ದಾರೆ ಎಂದರು.