ಬೆಂಗಳೂರು: ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿದ್ದರಿಂದ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಸೆಪ್ಟೆಂಬರ್ 29ರ ವರೆಗೆ ಜೋರಾಗಿ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಉತ್ತರ ಒಳನಾಡಿನಲ್ಲಿ ಭಾರಿ ಮಳೆಯಾಗಲಿದ್ದು, 7 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಬಾಗಲಕೋಟೆ, ಬೀದರ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ನೀಡಲಾಗಿದೆ.
ಬೆಳಗಾವಿ, ಧಾರವಾಡ, ಗದಗ, ಹಾವೇರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ತುಮಕೂರು, ವಿಜಯನಗರದಲ್ಲಿ ಮಳೆಯಾಗಲಿದೆ.ಕೊಡಗು, ಹಾಸನ, ಚಿಕ್ಕಮಗಳೂರು, ಶಿವಮೊಗ್ಗ, ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಸೆಪ್ಟೆಂಬರ್ 27ರ ಬಳಿಕ ಭಾರಿ ಮಳೆಯಾಗಲಿದೆ.
ಬಂಗಾಳಕೊಲ್ಲಿಯ ಉತ್ತರ ಭಾಗದ ಸಮುದ್ರ ಮೇಲ್ಮೈನಲ್ಲಿ ಕಡಿಮೆ ಒತ್ತಡದ ಪ್ರದೇಶ ಉಂಟಾಗಿದೆ. ಸೆಪ್ಟೆಂಬರ್ 23 ರಂದು ಬೆಳಿಗ್ಗೆ ವಾಯುವ್ಯ ಬಂಗಾಳ ಕೊಲ್ಲಿ ಮತ್ತು ಪಶ್ಚಿಮ ಬಂಗಾಳ-ಉತ್ತರ ಒಡಿಶಾದ ಪಕ್ಕದ ಕರಾವಳಿ ಪ್ರದೇಶಗಳಲ್ಲಿ ಅದು ನೆಲೆಗೊಂಡಿದೆ.
ಈ ಚಂಡಮಾರುತ ಪ್ರಸರಣವು ಸಮುದ್ರ ಮಟ್ಟಕ್ಕಿಂತ 5.8 ಕಿಲೋ ಮೀಟರ್ ಎತ್ತರದ ವರೆಗೆ ಹರಡಿದೆ. ಅಲ್ಲದೆ, ಸೆಪ್ಟೆಂಬರ್ 25ರ ಹೊತ್ತಿಗೆ ಪೂರ್ವ, ಮಧ್ಯ ಮತ್ತು ಉತ್ತರ ಬಂಗಾಳಕೊಲ್ಲಿಯಲ್ಲಿ ಮತ್ತೊಂದು ವಾಯುಭಾರ ಕುಸಿತ ಉಂಟಾಗುವ ಸಾಧ್ಯತೆಯಿದೆ. ಈ ವಾಯುಭಾರ ಕುಸಿತದಿಂದ ಉಂಟಾದ ಚಂಡಮಾರುತ ಪ್ರಸರಣವು ಒಡಿಶಾದಾದ್ಯಂತ ಸಾಗಿ ತೆಲಂಗಾಣದತ್ತ ಸಾಗಲಿದೆ. ಇದು ಸಮುದ್ರ ಮಟ್ಟದಿಂದ 3.1 ಮತ್ತು 5.8 ಕಿ.ಮೀ ನಡುವೆ ವಿಸ್ತರಿಸಿದೆ. ಆಂಧ್ರಪ್ರದೇಶದ ಕರಾವಳಿ ಭಾಗದ ಸಮೀಪ 5 ಕಿ.ಮೀ ಎತ್ತರದಲ್ಲಿ ಮತ್ತೊಂದು ವಾಯು ಚಂಡಮಾರುತದ ಪರಿಚಲನೆ ಇದ್ದು, ಇವೆರಡು ವಿಲೀನಗೊಳ್ಳುವ ಸಂಭವವಿದೆ. ಹೀಗಾಗಿ ಬಂಗಾಳ ಉಪಸಾಗರದ ಉತ್ತರ ಒಡಿಶಾ, ಆಂಧ್ರದ ಕರಾವಳಿ ಭಾಗದಲ್ಲಿ ವಾಯುಭಾರ ಕುಸಿತದಿಂದಾಗಿ ಕರ್ನಾಟಕದಲ್ಲಿಯೂ ಭಾರೀ ಮಳೆಯಾಗಲಿದೆ.
ರಾಜ್ಯದ ಹಲವು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಸೆ.23ರಿಂದ ಸೆ.29ರವರೆಗೆ ಹಲವಡೆ ಭಾರೀ ಮಳೆಯಾಗುವ ಸಾಧ್ಯತೆಯಿದ್ದು, ಉತ್ತರ ಒಳನಾಡು, ಕರಾವಳಿ ಭಾಗ ಹಾಗೂ ಬೆಂಗಳೂರಿನಲ್ಲಿ ಮಳೆಯಾಗಲಿದೆ ಎಂದು ಮುನ್ಸೂಚನೆ ನೀಡಿದೆ.
ಮೊದಲ ಎರಡು ದಿನ ಉತ್ತರ ಪ್ರದೇಶ, ಪಶ್ಚಿಮ ಬಂಗಾಳ, ಒಡಿಶಾ, ಛತ್ತಿಸ್ಗಢ, ಜಾರ್ಖಂಡ, ಬಿಹಾರ, ಮಹಾರಾಷ್ಟ್ರ, ನಾಗಾಲ್ಯಾಂಡ್, ಮಣಿಪುರ ಭಾಗಗಳಲ್ಲಿ ಧಾರಾಕಾರ ಮಳೆ ಆಗಲಿದೆ. ನಂತರದ ನಾಲ್ಕು ದಿನಗಳಲ್ಲಿ ಕೊಂಕಣ-ಗೋವಾ, ಮರಾಠವಾಡ, ಮಿಜೋರಾಂ, ಮೇಘಾಲಯ, ತೆಲಂಗಾಣ, ಆಂಧ್ರ ಪ್ರದೇಶ, ತಮಿಳುನಾಡು, ಕೇರಳ, ಕರ್ನಾಟಕದ ಒಳನಾಡು ಜಿಲ್ಲೆಗಳು ಸೇರಿದಂತೆ ಅನೇಕ ಭಾಗಗಳಲ್ಲಿ ಮಳೆಯಾಗಲಿದೆ. ಒಂದಷ್ಟು ಕಡೆ ಅತ್ಯಧಿಕ ಮಳೆ ಮುಂದುವರಿಯುವ ನಿರೀಕ್ಷೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ

