ಬೆಂಗಳೂರು: ಕಾಂಗ್ರೆಸ್ ನಲ್ಲಿ ಮುಖ್ಯಮಂತ್ರಿ ಆಯ್ಕೆ ಕಗ್ಗಂಟು ಬಗೆಹರಿದು ಸಿದ್ದರಾಮಯ್ಯ ಅವರು ಎರಡನೇ ಬಾರಿಗೆ ಕರ್ನಾಟಕದ ಮುಖ್ಯಮಂತ್ರಿಯಾಗಿ ಶನಿವಾರ ಮೇ 20 ರಂದು ಮಧ್ಯಾಹ್ನ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಇದಾದ ಬಳಿಕ ಈಗ ಕಾಂಗ್ರೆಸ್ ನಲ್ಲಿ ಸಚಿವ ಸಂಪುಟ ರಚನೆ ಪ್ರಮುಖ ನಾಯಕರಿಗೆ ಪ್ರಮುಖ ಸವಾಲಾಗಿದೆ. ಸಚಿವ ಸ್ಥಾನಕ್ಕಾಗಿ ಹಿರಿಯ ಶಾಸಕರು ಲಾಬಿ ನಡೆಸುತ್ತಿದ್ದು ಅವರ ಪರವಾಗಿ ಸಮುದಾಯದ ಮುಖಂಡರು, ಮಠಾಧೀಶರು ಕೂಡ ಬೇಡಿಕೆಯಿಡುತ್ತಿದ್ದಾರೆ. ಸಚಿವ ಸಂಪುಟ ರಚನೆ ಬಗ್ಗೆ ಇಂದು ಪಟ್ಟಿ ಅಂತಿಮವಾಗುವ ಸಾಧ್ಯತೆಯಿದೆ.
ಮುಖ್ಯಮಂತ್ರಿ ಮತ್ತು ಉಪಮುಖ್ಯಮಂತ್ರಿ ಅಲ್ಲದೇ 20 ಜನ ಸಚಿವರು ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಮೊದಲ ಹಂತದಲ್ಲಿ 10ರಿಂದ 15 ಅಥವಾ 20 ಸಚಿವರು ಪ್ರಮಾಣ ವಚನ ಸ್ವೀಕರಿಸಲಿದ್ದು, ಎರಡನೇ ಹಂತದಲ್ಲಿ ಪೂರ್ಣ ಪ್ರಮಾಣದಲ್ಲಿ ಸಚಿವ ಸ್ಥಾನ ಭರ್ತಿಗೆ ಚಿಂತನೆ ನಡೆಸಲಾಗಿದೆ ಎಂದು ತಿಳಿದು ಬಂದಿದೆ.
ನಿಯೋಜಿತ ಮುಖ್ಯಮಂತ್ರಿ ಸಿದ್ದರಾಮಯ್ಯ ಸಚಿವ ಸಂಪುಟ ರಚನೆ, ತಮ್ಮ ಸಂಪುಟಕ್ಕೆ ಸೇರ್ಪಡೆ ಮಾಡುವ ಸದಸ್ಯರ ಹೆಸರುಗಳ ಪಟ್ಟಿಯನ್ನು ಹಿಡಿದುಕೊಂಡು ಹೈಕಮಾಂಡ್ ಜೊತೆ ಚರ್ಚಿಸಲು ದೆಹಲಿಗೆ ಇಂದು ಬೆಳಗ್ಗೆ ಹೋಗಿದ್ದಾರೆ. ಅವರ ಜೊತೆ ಡಿ ಕೆ ಶಿವಕುಮಾರ್ ಸಹ ದೆಹಲಿಗೆ ಪ್ರಯಾಣ ಬೆಳೆಸಿದ್ದಾರೆ.
ಬೆಂಗಳೂರಿನಲ್ಲಿ ಶನಿವಾರ ನಡೆಯಲಿರುವ ಕರ್ನಾಟಕದ ನಿಯೋಜಿತ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ ಅವರ ಪ್ರಮಾಣ ವಚನ ಸಮಾರಂಭದಲ್ಲಿ ಸಮಾನ ಮನಸ್ಕ ವಿರೋಧ ಪಕ್ಷಗಳ ನಾಯಕರು ಪಾಲ್ಗೊಳ್ಳುವ ಸಾಧ್ಯತೆ ಇದೆ. ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಹಲವು ಮುಖ್ಯಮಂತ್ರಿಗಳು ಮತ್ತು ಪಕ್ಷದ ಮುಖಂಡರಿಗೆ ಆಹ್ವಾನವನ್ನು ನೀಡಿದ್ದಾರೆ. ಕಾರ್ಯಕ್ರಮಕ್ಕೆ ವೈಯಕ್ತಿಕವಾಗಿ ಅವರನ್ನು ಆಹ್ವಾನಿಸಿದ್ದಾರೆ.
ಖರ್ಗೆ ಅವರು ಸಿಪಿಐ ಪ್ರಧಾನ ಕಾರ್ಯದರ್ಶಿ ಡಿ ರಾಜಾ ಅವರಿಗೂ ಖುದ್ದು ಕರೆ ಮಾಡಿ ಪ್ರಮಾಣ ವಚನ ಸ್ವೀಕಾರ ಸಮಾರಂಭದಲ್ಲಿ ಪಾಲ್ಗೊಳ್ಳುವುದನ್ನು ಖಚಿತಪಡಿಸಿದ್ದಾರೆ. ಇದೇ ರೀತಿಯ ಆಹ್ವಾನವನ್ನು ಸಿಪಿಎಂ ಪ್ರಧಾನ ಕಾರ್ಯದರ್ಶಿ ಸೀತಾರಾಮ ಯೆಚೂರಿ ಮತ್ತು ಸಮಾಜವಾದಿ ಪಕ್ಷದ ನಾಯಕ ಅಖಿಲೇಶ್ ಯಾದವ ಅವರಿಗೂ ಕಳುಹಿಸಲಾಗಿದೆ.
ಖರ್ಗೆ ಅವರು ತಮಿಳುನಾಡು ಮುಖ್ಯಮಂತ್ರಿ ಎಂ ಕೆ ಸ್ಟಾಲಿನ್, ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ, ಬಿಹಾರ ಮುಖ್ಯಮಂತ್ರಿ ನಿತೀಶ ಕುಮಾರ ಮತ್ತು ಉಪ ಮುಖ್ಯಮಂತ್ರಿ ತೇಜಸ್ವಿ ಯಾದವ, ಎನ್ಸಿಪಿ ಮುಖ್ಯಸ್ಥ ಶರದ ಪವಾರ, ಮಹಾರಾಷ್ಟ್ರದ ಮಾಜಿ ಮುಖ್ಯಮಂತ್ರಿ ಉದ್ಧವ ಠಾಕ್ರೆ ಅವರನ್ನು ಆಹ್ವಾನಿಸಿದ್ದಾರೆ. ನ್ಯಾಷನಲ್ ಕಾನ್ಫರೆನ್ಸ್ ಮುಖ್ಯಸ್ಥ ಫಾರೂಕ ಅಬ್ದುಲ್ಲಾ ಅವರಿಗೂ ಆಹ್ವಾನ ನೀಡಲಾಗಿದೆ.
ಖರ್ಗೆ ಅವರು ಜಾರ್ಖಂಡ್ ಮುಖ್ಯಮಂತ್ರಿ ಹೇಮಂತ ಸೊರೇನ್ ಅವರಿಗೆ ಆಹ್ವಾನ ಕಳುಹಿಸಿದ್ದು, ಪ್ರಮಾಣ ವಚನ ಸ್ವೀಕಾರ ಸಮಾರಂಭದಲ್ಲಿ ಪಾಲ್ಗೊಳ್ಳುವ ಸಾಧ್ಯತೆ ಇದೆ. ದೆಹಲಿಯಲ್ಲಿರುವ ಸೋರೆನ್ ಅವರು ಮೊನ್ನೆ ಮೇ 16 ರಂದು ಖರ್ಗೆ ಅವರನ್ನು ಭೇಟಿ ಮಾಡಿ ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಗೆಲುವಿಗೆ ಅಭಿನಂದನೆ ಸಲ್ಲಿಸಿದ್ದರು.
ಬಿಹಾರ ಮುಖ್ಯಮಂತ್ರಿ ನಿತೀಶ ಕುಮಾರ ಅವರು ಕರ್ನಾಟಕದಲ್ಲಿ ಕಾಂಗ್ರೆಸ್ ಸರ್ಕಾರದ ಪ್ರಮಾಣ ವಚನ ಸ್ವೀಕಾರ ಸಮಾರಂಭದಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದು ಜೆಡಿಯು ವಕ್ತಾರ ರಾಜೀಬ್ ರಂಜನ್ ಹೇಳಿದ್ದಾರೆ. ಸಿಪಿಐಎಂ ನಾಯಕ ಸೀತಾರಾಂ ಯೆಚೂರಿ ಪ್ರಮಾಣ ವಚನ ಸಮಾರಂಭದಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದು ಮೂಲಗಳು ತಿಳಿಸಿವೆ. ಮಮತಾ ಬ್ಯಾನರ್ಜಿ ಅವರನ್ನು ಆಹ್ವಾನಿಸಲಾಗಿದೆ. ಆದರೆ ಅವರು ಭಾಗವಹಿಸುತ್ತಿಲ್ಲ.
ಸಿದ್ದರಾಮಯ್ಯ ಅವರು ಎಂ ಕೆ ಸ್ಟಾಲಿನ್ ಅವರಿಗೆ ದೂರವಾಣಿ ಕರೆ ಮಾಡಿ ಆಹ್ವಾನಿಸಿದ್ದಾರೆ. ಇದಕ್ಕೂ ಮುನ್ನ ಮಾತನಾಡಿದ ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ ಸಿ ವೇಣುಗೋಪಾಲ್, ಪ್ರಮಾಣ ವಚನ ಸ್ವೀಕಾರ ಸಮಾರಂಭಕ್ಕೆ ಸಮಾನ ಮನಸ್ಕ ಪಕ್ಷದ ನಾಯಕರನ್ನು ಆಹ್ವಾನಿಸುತ್ತಿದ್ದೇವೆ ಎಂದರು. ಕಾಂಗ್ರೆಸ್ ಮಾಜಿ ಅಧ್ಯಕ್ಷೆ ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಮತ್ತು ಪಕ್ಷದ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ ಅವರಿಗೂ ಆಹ್ವಾನ ನೀಡಲಾಗಿದೆ.
ಛತ್ತೀಸಗಡ ಮುಖ್ಯಮಂತ್ರಿ ಭೂಪೇಶ ಬಘೇಲಾ, ರಾಜಸ್ಥಾನ ಮುಖ್ಯಮಂತ್ರಿ ಅಶೋಕ ಗೆಹ್ಲೋಟ ಮತ್ತು ಹಿಮಾಚಲ ಪ್ರದೇಶ ಮುಖ್ಯಮಂತ್ರಿ ಸುಖವಿಂದರ ಸಿಂಗ್ ಸುಖು ಅವರನ್ನೂ ಆಹ್ವಾನಿಸಲಾಗಿದ್ದು, ಅವರೆಲ್ಲ ಭಾಗವಹಿಸುವ ನಿರೀಕ್ಷೆಯಿದೆ. ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರಿಗೆ ಕಾಂಗ್ರೆಸ್ ಆಹ್ವಾನ ನೀಡಿದರೂ ಮಮತಾ ಪ್ರಮಾಣ ವಚನದಲ್ಲಿ ಪಾಲ್ಗೊಳ್ಳುವ ಸಾಧ್ಯತೆ ಇಲ್ಲ. ಆದರೆ, ಮಮತಾ ಪ್ರತಿನಿಧಿಯನ್ನು ಕಳುಹಿಸಬಹುದು ಎಂದು ಹೇಳಲಾಗಿದೆ. ಬಿಜೆಪಿ ವಿರೋಧಿ ಗುಂಪಿನಲ್ಲಿ ಪ್ರಮುಖವಾಗಿರುವ ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ ಯಾದವ ಅವರು ಸಮಾರಂಭದಲ್ಲಿ ಪಾಲ್ಗೊಳ್ಳುವ ಸಾಧ್ಯತೆಯಿದೆ.
ರಾಜ್ಯದಲ್ಲಿ ಮಾಜಿ ಪ್ರಧಾನಿ ಹಾಗೂ ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡ, ಬಿಜೆಪಿ ನಾಯಕ ಬಿ.ಎಸ್.ಯಡಿಯೂರಪ್ಪ ಅವರಿಗೆ ಸಿದ್ದರಾಮಯ್ಯ ಖುದ್ದು ಆಹ್ವಾನ ನೀಡಿದ್ದಾರೆ ಎಂದು ತಿಳಿದುಬಂದಿದೆ.