ಹಾವೇರಿ: ಚಾಲಕನ ನಿಯಂತ್ರಣ ತಪ್ಪಿ ಖಾಸಗಿ ಬಸ್ ಪಲ್ಟಿಯಾದ ಪರಿಣಾಮ ಇಬ್ಬರು ಸ್ಥಳದಲ್ಲೇ ಮೃತಪಟ್ಟು, ಆರು ಮಂದಿ ಗಂಭೀರ ಗಾಯಗೊಂಡಿರುವ ಘಟನೆ ಜಿಲ್ಲೆಯ ಬ್ಯಾಡಗಿ ತಾಲೂಕಿನ ಮೊಟೇಬೆನ್ನೂರು ಬಳಿಯ ರಾಷ್ಟ್ರೀಯ ಹೆದ್ದಾರಿ 48 ರಲ್ಲಿ ನಡೆದಿದೆ.
ಘಟನೆಯಲ್ಲಿ ಬಾಲಕಿ ಅರ್ನವಿ(11 ವರ್ಷ) ಹಾಗೂ ಯಶ್ (20 ವರ್ಷ) ಮೃತಪಟ್ಟವರು ಎಂದು ಗುರುತಿಸಲಾಗಿದೆ.
ಬಸ್ಸು ಮಹಾರಾಷ್ಟ್ರದ ಸಾಂಗ್ಲಿಯಿಂದ ತಮಿಳುನಾಡು ಕಡೆ ಹೊರಟಿತ್ತು. ಹಾವೇರಿ ಜಿಲ್ಲೆಯ ಮೊಟೇಬೆನ್ನೂರು ಗ್ರಾಮದ ಬಳಿ ತೆರಳುತ್ತಿದ್ದಂತೆ ಕಾರೊಂದು ಅಡ್ಡ ಬಂದಿದ್ದರಿಂದ ಈ ವೇಳೆ ಅಪಘಾತ ತಪ್ಪಿಸಲು ಒಮ್ಮೆಲೆ ಬ್ರೇಕ್ ಹಾಕಿದ್ದಾರೆ. ಈ ವೇಳೆ ನಿಯಂತ್ರಣ ಕಳೆದುಕೊಂಡ ಬಸ್ಸು ಡಿವೈಡರಗೆ ಡಿಕ್ಕಿ ಹೊಡೆದು ಪಲ್ಟಿಯಾಗಿದೆ, ಘಟನೆಯಲ್ಲಿ ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದು, ಆರು ಮಂದಿ ಗಂಭೀರ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಹಾವೇರಿ ಜಿಲ್ಲಾಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ.
ಸ್ಥಳಕ್ಕೆ ಹಾವೇರಿ ಎಸ್ಪಿ ಯಶೋಧಾ ವಂಟಗೋಡಿ ಭೇಟಿ ನೀಡಿದ್ದು, ಅಗ್ನಿಶಾಮಕ ದಳದ ಸಿಬ್ಬಂದಿಯಿಂದ ಗಾಯಾಳುಗಳ ರಕ್ಷಣಾ ಕಾರ್ಯ ನಡೆಸಿದ್ದಾರೆ. ಈ ಕುರಿತು ಬ್ಯಾಡಗಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

