ಹೊಸದಿಲ್ಲಿ, ೨೫- ಬಿಜೆಪಿ ಸಂಸದ ಮತ್ತು ಕುಸ್ತಿ ಫೆಡರೇಶನ್ ಮುಖ್ಯಸ್ಥನ ನಡೆಸಿದ ಲೈಂಗಿಕ ದೌರ್ಜನ್ಯದ ವಿರುದ್ಧ ಕೆಲವು ಭಾರತೀಯ ಕುಸ್ತಿಪಟುಗಳು ತಮ್ಮ ಪ್ರತಿಭಟನೆಯನ್ನು ಪುನರಾರಂಭಿಸಿದ್ದು ಕುಸ್ತಿ ಫೆಡರೇಶನ್ ವಿರುದ್ಧ ದೂರು ನೀಡಿದರೂ ಪೊಲೀಸರು ಪ್ರಕರಣ ದಾಖಲಿಸಿಕೊಳ್ಳಲಿಲ್ಲ. ಅವರು ಅನಿವಾರ್ಯವಾಗಿ ಕೇಸ್ ದಾಖಲಿಸಲು ಕೋರಿ ಸಲ್ಲಿಸಲಾದ ಅರ್ಜಿಯ ತುರ್ತು ವಿಚಾರಣೆಗೆ ಕೋರಿ ಕೋರ್ಟಗೆ ಮನವಿ ಮಾಡಿದ್ದರು. ದೆಹಲಿ ಪೊಲೀಸರಿಗೆ ಈ ಬಗ್ಗೆ ಈಗ ಸುಪ್ರೀಮ ಕೋರ್ಟ ನೋಟಿಸ್ ಜಾರಿ ಮಾಡಿದೆ.
ಬಿಜೆಪಿ ಸಂಸದ ಬ್ರಿಜ್ ಭೂಷಣ ಶರಣ ಸಿಂಗ್ ಮಾಡಿದ ಲೈಂಗಿಕ ಕಿರುಕುಳ ಪ್ರಕರಣದಲ್ಲಿ ದೂರುದಾರರ ಗುರುತನ್ನು ಮರೆಮಾಚಲು ಏಳು ಕುಸ್ತಿಪಟುಗಳ ಹೆಸರನ್ನು ನ್ಯಾಯಾಂಗ ದಾಖಲೆಗಳಿಂದ ಕಡಿತಗೊಳಿಸುವಂತೆ ನ್ಯಾಯಾಲಯ ಆದೇಶಿಸಿದ್ದು ಏಪ್ರಿಲ್ 28 ರಂದು ವಿಚಾರಣೆ ನಿಗದಿ ಮಾಡಿದೆ. ಏಳು ಮಹಿಳಾ ಕುಸ್ತಿಪಟುಗಳು ತಮ್ಮ ಮೇಲೆ ನಡೆದ ಲೈಂಗಿಕ ಕಿರುಕುಳದ ಬಗ್ಗೆ ಬಿಜೆಪಿ ಸಂಸದನ ವಿರುದ್ಧ ದೂರು ನೀಡಿದರೂ ಎಫ್‌ಐಆರ್ ದಾಖಲಿಸಿಲ್ಲ ಎಂದು ಆರೋಪಿಸಿ ಸುಪ್ರೀಮ ಕೋರ್ಟಗೆ ಅರ್ಜಿ ಸಲ್ಲಿಸಿದ್ದರು.
ಅಂತರರಾಷ್ಟ್ರೀಯ ಪಂದ್ಯಗಳಲ್ಲಿ ಭಾರತವನ್ನು ಪ್ರತಿನಿಧಿಸಿರುವ ಕುಸ್ತಿಪಟುಗಳು ತಮ್ಮ ಮೇಲೆ ಲೈಂಗಿಕ ಕಿರುಕುಳ ನಡೆದಿದೆ ಎಂದು ಆರೋಪಿಸಿ ಅರ್ಜಿ ಸಲ್ಲಿಸಿದ್ದಾರೆ. ಈ ವಿಷಯವನ್ನು ನ್ಯಾಯಾಲಯವು ಪರಿಗಣಿಸಬೇಕಾಗಿದೆ ಎಂದು ಭಾರತದ ಮುಖ್ಯ ನ್ಯಾಯಮೂರ್ತಿ ಡಿವೈ ಚಂದ್ರಚೂಡ ನೇತೃತ್ವದ ಪೀಠ ಹೇಳಿದೆ.
ಪೊಲೀಸರು ಪ್ರಕರಣದ ಎಫ್‌ಐಆರ್ ದಾಖಲಿಸುವ ವರೆಗೆ ಪ್ರತಿಭಟನಾ ಸ್ಥಳದಲ್ಲಿ ಇರುವುದಾಗಿ ದೆಹಲಿಯ ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿದ್ದ ಕುಸ್ತಿಪಟುಗಳು ಹೇಳಿದ್ದಾರೆ. ಹಲವು ದಿನಗಳ ಹಿಂದೆ ದೂರು ಸಲ್ಲಿಸಿದಾಗಲೂ ಪೊಲೀಸರು ಪ್ರಕರಣ ದಾಖಲಿಸಲು ನಿರಾಕರಿಸಿದ್ದರು ಎಂದು ಅವರು ಆರೋಪಿಸಿದ್ದಾರೆ. ಕ್ರೀಡಾ ಸಚಿವಾಲಯದ ಭರವಸೆಯ ನಂತರ ಜನವರಿಯಲ್ಲಿ ಗಣ್ಯ ಅಥ್ಲೀಟ್‌ಗಳು ತಮ್ಮ ಪ್ರತಿಭಟನೆಯನ್ನು ಹಿಂಪಡೆದಿದ್ದರು, ಆದರೆ ಇನ್ನೂ ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ಅವರು ಮತ್ತೆ ಪ್ರತಿಭಟನೆ ನಡೆಸುತ್ತಿದ್ದಾರೆ.
ಈ ಬಗ್ಗೆ ಮಾತನಾಡಿದ ಕಾಮನ್‌ವೆಲ್ತ್ ಮತ್ತು ಏಷ್ಯನ್ ಗೇಮ್ಸ್‌ನಲ್ಲಿ ಚಿನ್ನ ಗೆದ್ದ ಮೊದಲ ಭಾರತೀಯ ಮಹಿಳಾ ಕುಸ್ತಿಪಟು ವಿನೇಶ ಫೋಗಟ್ ಅವರು, ನಾವು ಯಾರನ್ನೂ ಕುರುಡಾಗಿ ನಂಬುವುದಿಲ್ಲ. ಕಳೆದ ಬಾರಿ ನಾವು ದಾರಿ ತಪ್ಪಿಸಿದ್ದೇವೆ. ಈ ಬಾರಿ ಈ ಪ್ರಕರಣದಲ್ಲಿ ಯಾವುದೇ ರಾಜಕೀಯವಿಲ್ಲ ಎಂದು ನಾವು ಭಾವಿಸುತ್ತೇವೆ ಎಂದು ಹೇಳಿದರು.
ಫೆಡರೇಶನ್ ಮುಖ್ಯಸ್ಥ ಬ್ರಿಜ್ ಭೂಷಣ್ ಶರಣ್ ಸಿಂಗ್ ವಿರುದ್ಧ ಏಳು ಮಹಿಳಾ ಕುಸ್ತಿಪಟುಗಳು ಸೆಂಟ್ರಲ್ ದೆಹಲಿಯ ಕನ್ನಾಟ್ ಪ್ಲೇಸ್ ಪೊಲೀಸ್ ಠಾಣೆಯಲ್ಲಿ ಲೈಂಗಿಕ ಕಿರುಕುಳದ ದೂರು ದಾಖಲಿಸಿದ್ದಾರೆ. ಇನ್ನೂ ಯಾವುದೇ ಕ್ರಮ ಕೈಗೊಂಡಿಲ್ಲ, ಪೊಲೀಸರು ಪ್ರಕರಣದಲ್ಲಿ ಎಫ್‌ಐಆರ್ ದಾಖಲಿಸುವವರೆಗೆ ಹೋರಾಟ ಮುಂದುವರಿಸುವುದಾಗಿ ಪ್ರತಿಭಟನಾನಿರತ ಅಥ್ಲೀಟ್‌ಗಳು ಹೇಳಿದ್ದಾರೆ.
ನಾವು ಕ್ರೀಡಾ ಸಚಿವ ಅನುರಾಗ ಠಾಕೂರ್ ಮತ್ತು ಇತರ ಸಂಬಂಧಿತ ಅಧಿಕಾರಿಗಳನ್ನು ಸಂಪರ್ಕಿಸಲು ಮೂರು ತಿಂಗಳಿನಿಂದ ಪ್ರಯತ್ನಿಸುತ್ತಿದ್ದೇವೆ. ಸಮಿತಿಯ ಸದಸ್ಯರು ನಮಗೆ ಪ್ರತಿಕ್ರಿಯಿಸುತ್ತಿಲ್ಲ, ಕ್ರೀಡಾ ಸಚಿವಾಲಯವೂ ಏನನ್ನೂ ಹೇಳಿಲ್ಲ, ಅವರು ನಮ್ಮ ಕರೆಗಳನ್ನು ಸಹ ಸ್ವೀಕರಿಸುವುದಿಲ್ಲ. ನಾವು ದೇಶಕ್ಕಾಗಿ ಪದಕಗಳನ್ನು ಗೆದ್ದಿದ್ದೇವೆ ಮತ್ತು ಇದಕ್ಕಾಗಿ ನಮ್ಮ ವೃತ್ತಿಜೀವನವನ್ನು ಪಣಕ್ಕಿಟ್ಟಿದ್ದೇವೆ ಎಂದು ಅವರು ಹೇಳಿದರು.